ಮೊದಲನೇ ವಾಚನ: ಸಂಖ್ಯಾಕಾಂಡ - 21:4-9
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ಕೀರ್ತನೆ: 78:1-2, 34-38
ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು
ಎರಡನೇ ವಾಚನ: ಫಿಲಿಪ್ಪಿಯರಿಗೆ 2:6-11

ಶುಭಸಂದೇಶ: ಯೊವಾನ್ನ 3:13-17
ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
No comments:
Post a Comment