ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.11.2019

ಮೊದಲನೇ ವಾಚನ: ದಾನಿಯೇಲ  7:2-14 

ದಾನಿಯೇಲನು ತಾನು ಕಂಡ ಕನಸಿನ ವಿಷಯವಾಗಿ ಇಂತೆಂದನು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು. ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯಕೊಡಲಾಯಿತು. ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. "ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು," ಎಂದು ಅದಕ್ಕೆ ಹೇಳಲಾಯಿತು. ಆನಂತರ ನಾನು ನೋಡುತ್ತಿರುವಾಗಲೇ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕೆಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು. ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ  ಮೃಗಗಳಿಗಿಂತ ವಿಲಕ್ಷಣವಾಗಿತ್ತು ಅದಕ್ಕೆ ಹತ್ತು ಕೊಂಬುಗಳಿದ್ದವು. ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೇ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು. ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು.  ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆ ಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪು ನೀಡಲು ಕುಳಿತುಕೊಂಡರು. ಪಟ್ಟಿ ಪುಸ್ತಕಗಳನ್ನು ತೆರೆಯಲಾಯಿತು. ನಾನು ನೋಡುತ್ತಾ ಇದ್ದೆ: ಆ ಕಿರು ಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ - ಕುಲ - ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ. ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು! 

ಅಜರ್ಯ: 1:53-54, 55-56, 57-59 
ಶ್ಲೋಕ: ಸರ್ವೇಶ್ವರನನು ಕೊಂಡಾಡಿ ಅವರನ್ನು ಸ್ತುತಿಸಿ ಸದಾ ಸಂಕೀರ್ತಿಸಿ 

ಶುಭಸಂದೇಶ: ಲೂಕ 21:29-33 

ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು; "ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿ ಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತ್ತದೆ; ಆದರೆ ನನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

No comments:

Post a Comment