ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.01.2020

ಮೊದಲನೇ ವಾಚನ: ಯೆಶಾಯ 42:1-4, 6-7

ಇಗೋ, ನನ್ನ ದಾಸನು! ನನ್ನ ಆಧಾರ ಪಡೆದವನು. ನನ್ನಿಂದ ಆಯ್ಕೆಯಾದವನು, ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯ ರಾಷ್ಟ್ರಗಳಿಗೆ ಸಾರುವನಿವನು ಸದ್ದರ್ಮವನು. ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ. ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ದಿಗೆ ತರುವನಾತ ಸದ್ದರ್ಮವನು. ಎಡವಿಬೀಳನವನು, ಎದೆಗುಂದನವನು, ಜಗದೊಳು ಸ್ಥಾಪಿಸುವ ತನಕ ಸದ್ದರ್ಮವನು, ಎದುರು ನೋಡುವುವು ದ್ವೀಪದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು. ಸರ್ವೇಶ್ವರಸ್ವಾಮಿಯಾದ ನಾನು ಕೈ ಹಿಡಿದು ಕಾದಿರುಸುವೆನು ನಿನ್ನನು, ಕರೆದಿಹೆನು ನಿನ್ನನು ಸದ್ದರ್ಮಸಾಧನೆಗಾಗಿ, ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ, ನೇಮಿಸಿರುವೆ ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ. ಕೊಡುವೆ ನೀನು ಕಣ್ಣನ್ನು ಕುರುಡರಿಗೆ, ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.

ಕೀರ್ತನೆ: 9: 1-2, 3-4, 3, 9-10
ಶ್ಲೋಕ: ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು.

ಎರಡನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳು 10:34-38

ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: "ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಈಗ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿಸಿದೆ. ಇತ್ತೀಚೆಗೆ ಜುದೇಯ ನಾಡಿನಾದ್ಯಾಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು. ಇವು ನಜ಼ರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾ ವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವ ಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿಪೀಡಿತರಾದವರನ್ನು ಸ್ವಸ್ಥ ಪಡಿಸುತ್ತಾ ಸಂಚರಿಸಿದರು. 

ಶುಭಸಂದೇಶ: ಮತ್ತಾಯ 3: 13-17

ಯೊವಾನ್ನನಿಂದ ಸ್ನಾನ ದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು. "ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ" ಎಂದನು. ಆದರೇ ಯೇಸು, "ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು," ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು. ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು; ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದು ಬಂದು ನೆಲೆಸುವುದನ್ನು ಕಂಡರು. ಆಗ ಆಕಾಶದಿಂದ, "ಇವನೇ ನನ್ನ ಪುತ್ರ; ನನಗೆ ಪರಮ ಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು," ಎಂಬ ದೈವವಾಣಿ ಕೇಳಿಸಿತು.

No comments:

Post a Comment