ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.01.2020 - “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ"

ಮೊದಲನೇ ವಾಚನ: ಯೆಶಾಯ 49:3, 5-6

ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”

ಕೀರ್ತನೆ: 40:2, 4, 7-8, 8-9, 10

ಶ್ಲೋಕ: ಪ್ರಭೂ, ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ

ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ |
ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ ||
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು |
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು || (ಶ್ಲೋಕ)

ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ |
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? ||
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ |
ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ”|| (ಶ್ಲೋಕ)

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ ||
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ ||
ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು |
ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು |
ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು || (ಶ್ಲೋಕ)

ಎರಡನೇ ವಾಚನ: 1 ಕೊರಿಂಥಿಯರಿಗೆ 1:1-3

ಕ್ರಿಸ್ತ ಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ. ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!

ಶುಭಸಂದೇಶ: ಯೊವಾನ್ನ 1:29-34

ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ. ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ. ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು. ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದು ಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು. ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆ ಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದು ಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು. ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು. 

No comments:

Post a Comment