ಮೊದಲನೇ ವಾಚನ: 1 ಪೇತ್ರ 5:1-4
ಕ್ರಿಸ್ತಯೇಸುವಿನ ಮರಣ-ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ: ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ. ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ. ಆಗಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.
ಕೀರ್ತನೆ: 23:1-3, 4, 5, 6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ?
ಶುಭಸಂದೇಶ: ಮತ್ತಾಯ 16:13-19
ಯೇಸುಸ್ವಾಮಿ "ಫಿಲಿಪ್ಪನ ಸೆಜರೇಯ" ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, "ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?" ಎಂದು ಕೇಳಿದರು. ಅದಕ್ಕೆ ಶಿಷ್ಯರು, "ಸ್ನಾನಿಕ ಯೊವಾನ್ನ", ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು, "ಎಲೀಯನು" ಎನ್ನುತ್ತಾರೆ; "ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು," ಎಂಬುದು ಇನ್ನೂ ಕೆಲವರ ಅಭಿಪ್ರಾಯ, ಎಂದು ಉತ್ತರ ಕೊಟ್ಟರು. ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ಅಭಿಷಿಕ್ತರಾದ ಲೋಕೋದ್ದಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ," ಎಂದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: "ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತ ಪಡಿಸಿದ್ದು ನರಮಾನವ ಶಕ್ತಿ ಅಲ್ಲ, ಸ್ವರ್ಗದಲ್ಲಿರುವ ನನ್ನ ಪಿತನೇ. ನಾನು ನಿನಗೆ ಹೇಳುತ್ತೇನೆ, ಕೇಳು: "ನಿನ್ನ ಹೆಸರು ಪೇತ್ರ; ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು. ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತೀಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು."
No comments:
Post a Comment