ಮೊದಲನೇ ವಾಚನ: ಹೊಶೇಯ 6:1-6
ಸರ್ವೇಶ್ವರ ಇಂತೆನ್ನುತಾರೆ: ನನ್ನ ಜನರು ನನ್ನನ್ನು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು. ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ. ಖಂಡ ತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯ ದಂಡನೆ ಮಿಂಚಿನಂತೆ ಹೊರಡುವುದು. ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.
ಕೀರ್ತನೆ: 51:3-4, 18-19, 20-21
ಶ್ಲೋಕ: ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ
ಶುಭಸಂದೇಶ: ಲೂಕ 18:9-14
ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ. “ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ. “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.
ಮನಸ್ಸಿಗೊಂದಿಷ್ಟು : ಕ್ರಿಸ್ತ ಶಿಲುಬೆಯ ಮೇಲೆ ತೂಗಿ, ರಕ್ತ ಸುರಿಸುವಾಗ ಅವರಲ್ಲಿ ಇದ್ದ ಗುರಿ ಎಂದರೆ, ಮಾನವನ ಹೃದಯದಲ್ಲಿ ಸ್ವ-ಪ್ರೇಮವನ್ನು ಕಿತ್ತು ಹಾಕಿ ಅಲ್ಲಿ ದೈವ ಪ್ರೇಮವನ್ನು ಸ್ಥಾಪಿಸುವುದು. ಒಂದು ಹೆಚ್ಛಾಗುತಲೇ ಮತ್ತೊಂದು ಕಡಿಮೆಯಾಗುತ್ತಾ ಹೋಗುತ್ತದೆ - ವಾಲ್ಟರ್ ಜೆ ಚ್ಯಾಂಟ್ರಿ
ಪ್ರಶ್ನೆ : ನಾವು ಯಾವುದನ್ನು ಹಿಂಬಾಲಿಸುತ್ತಿದ್ದೇವೆ?
ಪ್ರಭುವೇ,
ಹಿಂಬಾಲಿಸುವ ಮನಸ್ಸಿದ್ದರೂ
ಚಿತ್ತ ಚಂಚಲ
ಪ್ರಾಣ ಕ್ಷಣಿಕವಾದರೂ
ಕ್ಷಣಿಕ ಸುಖಗಳತ್ತ
ಹಂಬಲ
ನನ್ನನೇ ಪರಿತ್ಯಜಿಸುವ
ನಿನ್ನನೇ ಅನುಕರಿಸುವ
ಗೆಲುವು ನನ್ನದಾಗಲಿ
ಸೋಲು ನನಗಾಗಲಿ
-ಚಿತ್ತ
No comments:
Post a Comment