ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 8:26-4
ಶುಭಸಂದೇಶ: ಯೊವಾನ್ನ6:44-51
ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯಮಾರ್ಗ,” ಎಂದನು. ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು. ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು. ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು. ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು. ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ. ಆತನನ್ನು ಅವಮಾನಪಡಿಸಲಾಯಿತು, ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು, ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕ ಜೀವವನ್ನೇ ಮೊಟಕುಗೊಳಿಸಲಾಯಿತು.” ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ. ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?” ಎಂದು ಕೇಳಿದನು. ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು. ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ” ಎಂದನು. ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು. ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು. ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು. ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.
ಕೀರ್ತನೆ: 66:8-9, 16-17, 20
ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ
ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ
ಜನಾಂಗಗಳೇ, ನಮಿಸಿರಿ ನಮ್ಮ ದೇವನನು I
ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II
ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I
ಕಾಲೆಡವದಂತೆ ಕಾಪಾಡಿದನಯ್ಯಾ II
ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I
ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II
ದೇವನಿಗೆನ್ನ ಮನ ಸ್ವರವೆತ್ತಿ ಮೊರೆಯಿಟ್ಟಿತು I
ಆತನ ಸ್ತುತಿ ನನ್ನ ಬಾಯಲಿ ತುಳುಕುತ್ತಿತ್ತು II
ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I
ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II
ಶುಭಸಂದೇಶ: ಯೊವಾನ್ನ6:44-51
ಯೆಹೂದ್ಯರಿಗೆ ಪ್ರತ್ಯುತ್ತರವಾಗಿ ಯೇಸುವು, "ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ. ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಗೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ. ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ. ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಜೀವದಾಯಕ ರೊಟ್ಟಿ ನಾನೇ. ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು. ಸ್ವರ್ಗದಿಂದ ಇಳಿದು ಬಂದ ರೊಟ್ಟಿಯಾದರೋ ಹಾಗಲ್ಲ. ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ. ನಾನೇ ಸ್ವರ್ಗದಿಂದ ಇಳಿದು ಬಂದ ಜೀವಂತ ರೊಟ್ಟಿ. ಈ ರೋಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.
No comments:
Post a Comment