ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

03.05.2020 - "ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:14, 36-41


ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. “ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.” ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.  ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು. ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು. 

ಕೀರ್ತನೆ: 23:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?


ಪ್ರಭು ಕುರಿಗಾಹಿಯಾಗಿರಲು ನನಗೆ I
ಕುಂದುಕೊರತೆಗಳೆಲ್ಲಿಯವು ಎನಗೆ? II
ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I

ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ 


ಎರಡನೇ ವಾಚನ: 1 ಪೇತ್ರನು 2:20-25

ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ. ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು. ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ. ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು. ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ. ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.

ಶುಭಸಂದೇಶ: ಯೊವಾನ್ನ 10:1-10


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿ ಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಬಾಗಿಲ ಮೂಲಕ ಬರುವವನು ಕುರಿಗಾಹಿ. ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ. ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥ ಮಾಡಿಕೊಳ್ಳಲಿಲ್ಲ. ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.

No comments:

Post a Comment