ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:19-28
ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು. ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು. ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು. ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು. ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು. ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.
ಕೀರ್ತನೆ: 145:10-11, 12-13, 21
ಶ್ಲೋಕ: ಅರಿವರಿಂತು ಜನರು ತನ್ನ ಶೂರಕಾರ್ಯಗಳನು, ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು.
ಶ್ಲೋಕ: ಅರಿವರಿಂತು ಜನರು ತನ್ನ ಶೂರಕಾರ್ಯಗಳನು, ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು.
ಪ್ರಭು, ನಿನ್ನನು
ಸ್ತುತಿಪುದು ಸೃಷ್ಟಿಯೆಲ್ಲವು
I
ಕೊಂಡಾಡುವುದು ನಿನ್ನನು
ಭಕ್ತ ಸಮೂಹವು
II
ಪ್ರಸಿದ್ಧಪಡಿಸುವರು ನಿನ್ನ
ರಾಜ್ಯದ ಮಹತ್ವವನು
I
ವರ್ಣಿಸುವರವರು ನಿನ್ನ
ಶಕ್ತಿ ಸಾಮರ್ಥ್ಯವನು
II
ಅರಿವರಿಂತು ಜನರು
ನಿನ್ನ ಶೂರ
ಕಾರ್ಯಗಳನು I
ಗ್ರಹಿಸುವರು ನಿನ್ನ
ರಾಜ್ಯದ ಮಹಿಮೆ
ಪ್ರಭಾವವನು II
ಶಾಶ್ವತವಾದುದು ನಿನ್ನ
ರಾಜ್ಯವು I
ಇರುವುದೆಂದಿಗು ನಿನ್ನ
ಆಳ್ವಿಕೆಯು II
ಸಲಹುವನು ತನ್ನನು
ಪ್ರೀತಿಸುವವರೆಲ್ಲರನು I
ನಾಶಮಾಡುವನು ದುರ್ಮಾರ್ಗಿಗಳೆಲ್ಲರನು
II
ಶುಭಸಂದೇಶ: ಯೊವಾನ್ನ 14:27-31
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ. ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ. ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು.” ಎಂದರು.
No comments:
Post a Comment