ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

06.06.2020 - ಈಕೆಯಾದರೋ ತನ್ನ ಕಡು ಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು

ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8

ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ: ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು. ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ. ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ. ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು. ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. 

ಕೀರ್ತನೆ: 71-89, 14-15, 16-17, 22

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು

ಶುಭಸಂದೇಶ: ಮಾರ್ಕ 12:38-44


ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ. ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು. ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು. ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ; ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.

No comments:

Post a Comment