ಮೊದಲನೇ ವಾಚನ: 2 ಅರಸುಗಳು 2:1, 6-14
ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು. ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು. ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.
ಕೀರ್ತನೆ: 31:20, 21, 24
ಶ್ಲೋಕ: ಪ್ರಭುವಿಗಾಗಿ ಕಾದಿಹೆ ಜನರೇ, ನಿಮಗಿರಲಿ ಅಭಯ
ಶುಭಸಂದೇಶ: ಮತ್ತಾಯ 6:1-6, 16-18
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”
No comments:
Post a Comment