ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13
ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.
ಕೀರ್ತನೆ: 69:8-10, 14, 17, 33-35
ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ
ಎರಡನೇ ವಾಚನ: ರೋಮನರಿಗೆ 5:12-15
ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.
ಶುಭಸಂದೇಶ: ಮತ್ತಾಯ 10:26-33
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.
No comments:
Post a Comment