ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.08.20 - "ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 9:1-7; 10:18-22

ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ, “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿ ಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು. ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;  ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಕೀರ್ತನೆ: 113:1-2, 3-4, 5-6

ಶ್ಲೋಕ: ಪ್ರಭುವಿನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ

ಶುಭಸಂದೇಶ: ಮತ್ತಾಯ 18:15-20

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, “ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.  ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


No comments:

Post a Comment