ಮೊದಲನೇ ವಾಚನ: 2 ಥೆಸಲೋನಿಯರಿಗೆ 3:6-10, 16-18
ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!
ಕೀರ್ತನೆ: 128:1-2, 4-5
ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು
ಶುಭಸಂದೇಶ: ಮತ್ತಾಯ 23:27-32
ಯೇಸು ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು: “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ. ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ. ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ. ಹೀಗೆ ಪ್ರವಾದಿಗಳನ್ನು ಕೊಲೆ ಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."
No comments:
Post a Comment