ಮೊದಲನೇ ವಾಚನ: 1 ಕೊರಿಂಥಿಯರಿಗೆ 9:16-19, 22-27
ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ, ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ. ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನ ಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ. ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.ಕೀರ್ತನೆ: 84:3, 4, 5-6, 8, 12
ಶ್ಲೋಕ: ಸ್ವರ್ಗಸೇನಾಧೀಶ್ವರಾ, ನಿನ್ನ ನಿವಾಸಗಳೆನಿತೋ ಸುಂದರ
ಶುಭಸಂದೇಶ: ಲೂಕ 6:39-42
ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ? ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು."
No comments:
Post a Comment