ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22
ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ. ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ. ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ. ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ? ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ. ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು. ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?
ಕೀರ್ತನೆ: 116:12-13, 17-18
ಶ್ಲೋಕ: ಅರ್ಪಿಸುವೆ ಪ್ರಭೂ ನಾ ನಿನಗೆ ಕೃತಜ್ಞತಾಬಲಿಗಳನು
ಶುಭಸಂದೇಶ: 6:43-49
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದು ಹೇಳಿದರು: “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ. ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ? ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ: ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು. ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.
No comments:
Post a Comment