ಮೊದಲನೇ ವಾಚನ: ಉಪದೇಶ 11:9--12:8
ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯ ವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು. ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು. ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು. ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು; ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು. ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿಯದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿ ಹೋಗುವುದು; ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂ ಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು, ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿ ಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು. ಮಣ್ಣಿನ ದೇಹ ತನ್ನ ಭೂಮಿಗೆ ಸೇರಿ ಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು, (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ). “ವ್ಯರ್ಥವೇ ವ್ಯರ್ಥ ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.ಕೀರ್ತನೆ: 90:3-4, 5-6, 12-13, 14, 17
ಶ್ಲೋಕ: ಪ್ರಭೂ, ತಲತಲಾಂತರಕ್ಕೂ ಶ್ರೀನಿವಾಸ ನಿನೆಮಗೆ
ಶುಭಸಂದೇಶ: ಲುಕ 9:43-45
ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ, “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು. ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.
No comments:
Post a Comment