03.10.20

 ಮೊದಲನೇ ವಾಚನ: ಯೋಬನ ಗ್ರಂಥ  42:1-3, 5-6, 12-16

ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು: “ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ. ‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ. ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ. ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.” ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.  ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.  ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.  ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.  ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು. ಹಣ್ಣು ಹಣ್ಣು ಮುದುಕನಾಗಿ ಸತ್ತನು. 

ಕೀರ್ತನೆ: 119:66, 71, 75, 91, 125, 130

ಶ್ಲೋಕ: ಪ್ರಭೂ, ತೋರು ನಿನ್ನ ಮುಖದರ್ಶನ ಈ ದಾಸನಿಗೆ 

ಶುಭಸಂದೇಶ: ಲೂಕ 10:17-24

"ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿದೆ ಎಂದು ಸಂತೋಷ ಪಡಿ," ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.  ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.  ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.  ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು. ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.  ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.  ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.  ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...