ಮೊದಲನೇ ವಾಚನ: ಎಫೆಸಿಯರಿಗೆ 3:2-12
ಸಹೋದರರೇ, ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ. ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ. ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ. ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ. ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ. ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು. ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು. ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು. ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು. ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.ಯೆಶಾಯ: 12:2-3, 4, 5-6
ಶ್ಲೋಕ: ಉದ್ಧರಿಸುವ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.
ಶುಭಸಂದೇಶ: ಲೂಕ 12:39-48
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."
No comments:
Post a Comment