ಮೊದಲನೇ ವಾಚನ: ಆದಿಕಾಂಡ 15: 1-6; 21: 1-3
ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯ ದರ್ಶನ ಆಯಿತು. ಅದರಲ್ಲಿ ಸರ್ವೇಶ್ವರಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ, ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ.” ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - "ಸ್ವಾಮಿ ಸರ್ವೇಶ್ವರಾ, ನನಗೆ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆ ಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ. ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು. ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ,” ಎಂದಿತು. ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು. ಅಬ್ರಾಮನು ಸರ್ವೇಶ್ವರಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು. ಸರ್ವೇಶ್ವರಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು. ಆಕೆ ಗರ್ಭಿಣಿಯಾಗಿ ಅಬ್ರಹಾಮನಿಂದ ಒಬ್ಬ ಮಗನನ್ನು ಹೆತ್ತಳು. ಅದೂ ಅಬ್ರಹಾಮನು ಮುದುಕನಾಗಿದ್ದಾಗ, ದೇವರು ಮೊದಲೇ ನಿರ್ಧರಿಸಿದ್ದ ಕಾಲಕ್ಕೆ ಹೆತ್ತಳು. ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.
ಕೀರ್ತನೆ: 105: 1-2, 3-4, 5-6, 8-9
ಶ್ಲೋಕ: ಪ್ರಭು ನಮ್ಮ ದೇವನೆಂಬುದು ಶ್ರುತ, ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು.
ಎರಡನೇ ವಾಚನ: ಹೀಬ್ರಿಯರಿಗೆ 11: 8, 11-12, 17-19
ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು. ಇದಲ್ಲದೆ, ಪ್ರಾಯ ಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಗಸ್ಥರು ಎಂಬ ಭರವಸೆ ಆಕೆಗಿತ್ತು. ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾವಾದ ಸಂತತಿಗೆ ತಂದೆಯಾದನು. ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ. ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇದೊಂದು ಮುನ್ಸೂಚನೆಯಾಗಿತ್ತು.
ಶುಭಸಂದೇಶ: ಲೂಕ 2: 22-40
ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು. ನೀನಿತ್ತ ಉದ್ದಾರಕನನು ನಾ ಕಂಡೆ ಕಣ್ಣಾರೆ ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ; ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.” ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆ ತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. (ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಘನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಭತ್ತನಾಲ್ಕು ವರ್ಷ ವಯಸ್ಸು. ಮಹಾ ದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಮರಳಿ ನಜರೇತಿಗೆ ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.
No comments:
Post a Comment