ಮೊದಲನೇ ವಾಚನ: 1 ಯೊವಾನ್ನ 2:18-21
ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮಿಾಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ. ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ವಷ್ಟವಾಗಿ ಕಂಡುಬರುತ್ತದೆ. ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ, ಸತ್ಯವನ್ನು ಅರಿತವರಾಗಿದ್ದೀರಿ. ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು ಆದುದರಿಂದ ನಾನು ನಿಮಗೆ ಬರೆದಿದ್ದೇನೆ.
ಕೀರ್ತನೆ: 96:1-2,11-12,13
ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು
ಶುಭಸಂದೇಶ: ಯೊವಾನ್ನ 1:1-18
ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು. ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ," 'ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಟರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಳದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.
No comments:
Post a Comment