Thursday, November 26, 2020

30.11.20

ಮೊದಲನೇ ವಾಚನ: ರೋಮನರಿಗೆ 10:9-18

“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ. ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ. ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ. “ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ. ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ? ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ. ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ. ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ. ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.

ಶುಭಸಂದೇಶ:, ಮತ್ತಾಯ 4:18-22

ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. “ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

29.11.20 - "ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ"

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 63:16-17, 19 

ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ. ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ. ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ! ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ? ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮ ಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು. ತಮ್ಮನ್ನು ಕಾದು ಎದುರು ನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ. ಯಾವ ಕಣ್ಣಿಗೂ ಕಾಣಿಸಲಿಲ್ಲ. ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ? ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿ ಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು. ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ. 

ಕೀರ್ತನೆ: 80:2-3, 15-16, 18-19

ಶ್ಲೋಕ: ಎಲೈ ದೇವನೇ, ಪುನರುದ್ದಾರಮಾಡೆಮ್ಮನು, ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು. 

ಎರಡನೇ ವಾಚನ: 1ಕೊರಿಂಥಿಯರಿಗೆ 1:3-9 

ಸಹೋದರರೇ, ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ! ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ. ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ. ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ. ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು. ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು. 

ಶುಭಸಂದೇಶ: ಮಾರ್ಕ 13:33-37 


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ. ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ; ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು. ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು! ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.

28.11.20 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 22:1-7


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ, ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು. ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು. ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು. ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು. ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ. “ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಕೀರ್ತನೆ: 95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

27.11.20 - "ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು. ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು. ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು. ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು. ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. 

ಕೀರ್ತನೆ: 84:3, 4, 5-6, 8

ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ  

ಶುಭಸಂದೇಶ: ಲೂಕ 21:29-33


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.