Sunday, December 6, 2020

11.12.20 - "ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? "

ಮೊದಲನೇ ವಾಚನ: ಯೆಶಾಯ 48: 17-19 


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರಸ್ವಾಮಿಯೆ ನುಡಿದಿಹನು: “ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರಸ್ವಾಮಿ ದೇವರು ನಾನು. ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಅಗಣಿತವಾಗಿರುತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”

ಕೀರ್ತನೆ: 1: 1-2, 3, 4, 6 

ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ. 

ಶುಭಸಂದೇಶ: ಮತ್ತಾಯ 11: 16-19 


ಯೇಸು ಜನಸಮೂಹವನ್ನುದ್ದೇಶಿಸಿ ಹೀಗೆಂದರು: "ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ," ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ ‘ಇವನಿಗೆ ದೆವ್ವ ಹಿಡಿದಿದೆ’ ಎಂದರು. ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ," ಎಂದರು.

10.12.20 - ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಮೊದಲನೇ ವಾಚನ: ಯೆಶಾಯ 41: 13-20 


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ. ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ. ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ. ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ? ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು. ನೆಡುವೆನು ಅಡವಿಯಲಿ ದೇವದಾರು, ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’

ಕೀರ್ತನೆ: 145: 1, 9, 10-11, 12-13ab 

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು, ಸಹನಶೀಲನು, ಪ್ರೀತಿಪೂರ್ಣನು. 

ಶುಭಸಂದೇಶ: ಮತ್ತಾಯ 11: 11-15 

ಯೇಸು ಜನಸಮೂಹಕ್ಕೆ ಯೋವಾನ್ನನನ್ನು ಕುರಿತು ಹೀಗೆಂದರು: ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಟನೇ ಸರಿ. ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗೂ ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.

09.12.20 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"

ಮೊದಲನೇ ವಾಚನ: ಯೆಶಾಯ 40: 25-31 


ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆಗ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯ ಬೀಳದಿದೆ’ ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮಥ್ರ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿದರು, ನಡೆದರೂ ಬಳಲರು.

ಕೀರ್ತನೆ: 103: 1-2, 3-4, 8, 10

ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು."

ಶುಭಸಂದೇಶ: ಮತ್ತಾಯ 11: 28-30 


ಈ ಸಮಯದಲ್ಲಿ ಯೇಸು ಹೀಗೆಂದರು: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,".

8.12.20 - “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು"

ಮೊದಲನೇ ವಾಚನ: ಆದಿಕಾಂಡ 3: 9-15, 20 


ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು. ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು. ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು. ಸರ್ವೇಶ್ವರನಾದ ದೇವರು ಈ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರ ಕೊಟ್ಟಳು. ಆಗ, ಸರ್ವೇಶ್ವರನಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ. ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ. ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನುಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನು.” ಆದಾಮನು ತನ್ನ ಹೆಂಡತಿಗೆ “ಹವ್ವ” ಎಂದು ಹೆಸರಿಟ್ಟನು. ಏಕೆಂದರೆ ಮಾವನಕುಲಕ್ಕೆ ಮೂಲಮಾತೆ ಆಕೆ.

ಕೀರ್ತನೆ: 98: 1, 2-3ab, 3cd-4 

ಶ್ಲೋಕ: ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು, ಎಸಗಿಹನಾತನು ಪವಾಡಕಾರ್ಯಗಳನು. 

ಎರಡನೇ ವಾಚನ: ಎಫೆಸಿಯರಿಗೆ 1: 3-6, 11-12 

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.

ಶುಭಸಂದೇಶ: ಲೂಕ 1: 26-38 


ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು. ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು. ಆಗ ಮರಿಯಳು, “ಇಗೋ, ನಾನು ದೇವರ ಸೇವಕಿ, ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

07.12.20

ಮೊದಲನೇ ವಾಚನ: ಯೆಶಾಯ 35: 1-10 

ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು. ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು. ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು. ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ. ಚಂಚಲ ಹೃದಯರಿಗೆ ಹೀಗೆಂದು ಹೇಳಿ: “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.” ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ. ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ. ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು. ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು. ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ. ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.

ಕೀರ್ತನೆ: 85: 9ab and 10, 11-12, 13-14
ಶ್ಲೋಕ: ಅಗೋ, ದೇವನು ತಾನೇ ಬರುವನು ನಿಮ್ಮನ್ನು ರಕ್ಷಿಸಲು. 

ಶುಭಸಂದೇಶ:  ಲೂಕ 5: 17-26 

ಒಮ್ಮೆ ಯೇಸುಸ್ವಾಮಿ ಬೋಧನೆ ಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು. ಆಗ ಕೆಲವರು ಒಬ್ಬ ಪಾಶ್ರ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು. ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು. ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು? ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾಶ್ರ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು. ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು. ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.