ಮೊದಲನೇ ವಾಚನ: 1 ಯೊವಾನ್ನ 5: 5-13
ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ, ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ. ಹೀಗೆ ಪವಿತ್ರಾತ್ಮ, ಜಲ ಮತ್ತು ರಕ್ತವೆಂಬ ಮೂರು ಸಾಕ್ಷಿಗಳು ಇವೆ. ಈ ಮೂರೂ ಕೊಡುವ ಸಾಕ್ಷ್ಯ ಒಂದೇ. ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ. ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ. ದೇವರು ನಮಗೆ ನಿತ್ಯ ಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ. ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ. ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.
ಕೀರ್ತನೆ: 147: 12-15, 19-20
ಶ್ಲೋಕ: ಜೆರುಸಲೇಮೇ, ಕೀರ್ತಿಸು ಪ್ರಭುವನು
ಶುಭಸಂದೇಶ: ಲೂಕ 5: 12-16
ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು. ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ಧಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.
Prabhuve nimage sthuthi salali Amen 🙏
ReplyDelete