ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 6:10-20
ಸಹೋದರರೇ, ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ. ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ. ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು. ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು. “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು. ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು. ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ. ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು. ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು. ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು. ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.
ಪ್ರಭುವಿನ ವಾಕ್ಯ
ಕೀರ್ತನೆ: 111:1-2, 4-5, 9-10
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುಸು ಆತನಿಗೆ.
ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I
ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II
ಮಹತ್ತಾದವು ಪ್ರಭುವಿನಾ ಕಾರ್ಯಗಳು I
ಕೊಂಡಾಡುವರು ಅವುಗಳನು ಭಕ್ತಾದಿಗಳು II
ಆತನ ಅದ್ಭುತಕಾರ್ಯ ಸ್ಮರಣೀಯ I
ಕರುಣಾವಂತ ಪ್ರಭು, ಪ್ರೀತಿಮಯ II
ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I
ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II
ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I
ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I
ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II
ಸುಜ್ಞಾನಕ್ಕೆ ಮೂಲವು ದೈವಭಯವು I
ಅದರ ಪಾಲನೆಯು ವಿವೇಕತನವು I
ಪ್ರಭುವಿಗೆ ಸ್ತೋತ್ರ ಸದಾಕಾಲವು II
ಮಾರ್ಕನು ಬರೆದ ಶುಭಸ೦ದೇಶ 2:23-28
ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.
ಪ್ರಭು ಕ್ರಿಸ್ತರ ಶುಭಸ೦ದೇಶ
No comments:
Post a Comment