ಮೊದಲನೆಯ ವಾಚನ: ಯೋಬ 7:1-4, 6 - 7;
“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ. ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ. ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು. ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ. ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ. ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.
ಪ್ರಭುವಿನ ವಾಕ್ಯ
ಕೀರ್ತನೆ: 147: 1, 2-4, 6-7. V. 3
ಶ್ಲೋಕ: ವಾಸಿಮಾಡುವನು ಮುರಿದ ಮನಸ್ಸುಳ್ಳವರನು I
ಕಟ್ಟಿ ಗುಣಪಡಿಸುವನು ಅವರ ಗಾಯಗಳನು II
ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I
ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II
ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I
ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II
ವಾಸಿಮಾಡುವನು ಮುರಿದ ಮನಸ್ಸುಳ್ಳವರನು I
ಕಟ್ಟಿ ಗುಣಪಡಿಸುವನು ಅವರ ಗಾಯಗಳನು II
ನಿಯಮಿಸಿಹನು ತಾರೆಗಳ ಸಂಖ್ಯೆಯನು I
ಇಟ್ಟಿಹನು ಪ್ರತಿಯೊಂದಕೂ ಹೆಸರನು II
ನಮ್ಮ ಪ್ರಭು ಘನವಂತ, ಪರಾಕ್ರಮಿ I
ಅಪರಿಮಿತವಾದುದು ಆತನ ಜ್ಞಾನನಿಧಿ II
ಆಧಾರವಾಗಿಹನು ಪ್ರಭು ದೀನರಿಗೆ I
ತುಳಿದುಬಿಡುವನು ದುರ್ಜನರನು ನೆಲಕೆ II
ಎರಡನೆಯ ವಾಚನ: 1 ಕೊರಿಂಥಿಯರಿಗೆ 9:16 - 19, 22 – 23
ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ.
ಪ್ರಭುವಿನ ವಾಕ್ಯ
ಶುಭಸಂದೇಶ ಮಾರ್ಕ 1:29-39
ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ. ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು. 36ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು. ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು. ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.
ಪ್ರಭುವಿನ ಶುಭಸಂದೇಶ
No comments:
Post a Comment