ಮೊದಲನೆಯ ವಾಚನ : ಧರ್ಮೋಪದೇಶಕಾಂಡ 30 :15-20
“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ. ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು. ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ, ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”
ಶುಭಸಂದೇಶ : ಲೂಕ 9 : 22-25
“ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು. ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?
ಮನಸ್ಸಿಗೊಂದಿಷ್ಟು : "ಕಷ್ಟವಿರುವವರು, ಕಷ್ಟವಿಲ್ಲದವರು ಎನ್ನುವುದರ ಮೇಲೆ ಜನರನ್ನು ವಿಂಗಡಿಸಲಾಗಿಲ್ಲ, ಬದಲಿಗೆ ಶಿಲುಬೆ ಹೊತ್ತವರು, ಹೊರದವರು , ಹೊರಲು ಸಿದ್ಧವಿಲ್ಲದವರು ಎಂಬುದಾಗಿ ಜನರನ್ನು ವಿಂಗಡಿಸಲಾಗಿದೆ" ಎನ್ನುತ್ತಾರೆ ಲೇಖಕ ಜೆ.ರಿಕಬೇ.
ನಮ್ಮದು ಯಾವ ವರ್ಗ? ಹೊರುತ್ತಿರುವವವರೇ? ಸಿದ್ಧರಿರುವವರೇ ಅಥವಾ ಶಿಲುಬೆ ನಮಗೆ ಬೇಡದ ಉಸಾಬರಿಯೇ? ನಾವು ಯೇಸುವಿನ ಹಿಂಬಾಲಕರೋ? ಅಲ್ಲವೋ? ಎನ್ನುವುದಕ್ಕೆ ಉತ್ತರ ಅಲ್ಲಿದೆ - ಜೀವವಾಕ್ಯ
ಪ್ರಭುವೇ , ನಿಮಗಾಗಿ ಕಳೆದುಕೊಳ್ಳುವ
ನಿತ್ಯಕ್ಕೂ ಉಳಿಸಿಕೊಳ್ಳುವ ವರವ ನೀಡು ದೇವಾ
-ಚಿತ್ತ
No comments:
Post a Comment