ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

13.03.21 - "ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು"

ಮೊದಲನೇ ವಾಚನ: ಹೊಶೇಯ: 6: 1-6

ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು. ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ. ಖಂಡ ತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯ ದಂಡನೆ ಮಿಂಚಿನಂತೆ ಹೊರಡುವುದು. ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.

ಕೀರ್ತನೆ: 51: 1-3 16-19
ಶ್ಲೋಕ: ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ

ಕೃಪಾಳು, ದೇವಾ, ಕರುಣಿಸೆನ್ನನು I
ಕರುಣಾನಿಧಿ, ಅಳಿಸೆನ್ನ ದೋಷವನು II

ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I
ದೋಷಪರಿಹರಿಸಿ ಶುದ್ಧಗೊಳಿಸೆನ್ನನು II

ಬಲಿಯರ್ಪಣೆಯಲಿ ನಿನಗೊಲವಿಲ್ಲ I
ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II

ಮುರಿದ ಮನವೇ ದೇವನೊಲಿವ ಯಜ್ಞವು I
ನೊಂದು ಬೆಂದ ಮನವನಾತ ಒಲ್ಲೆಯೆನನು II

ಸಿಯೋನಿಗೆ ದೇವಾ, ಶುಭವನು ಕರುಣಿಸು I
ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II

ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I
ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II

ಶುಭಸ೦ದೇಶ: ಲೂಕ: 18: 9-14


ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ. “ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ. “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.

ಮನಸ್ಸಿಗೊಂದಿಷ್ಟು :  ಇಂದಿನ ಶುಭಸಂದೇಶದಲ್ಲಿ ಇಬ್ಬರ ಪ್ರಾರ್ಥನೆ ಇದೆ.  ಚಿಂತಕರೊಬ್ಬರು ಹೇಳುವಂತೆ ಫರಿಸಾಯ ಪ್ರಾರ್ಥಿಸಲಿಲ್ಲ, ಬದಲಿಗೆ ತಾನೆಷ್ಟು ಒಳ್ಳೆಯವನೆಂದು ದೇವರಿಗೆ  ವರದಿ ಮಾಡಿದನಷ್ಟೆ. ಸುಂಕ ವಸೂಲಿಯವನು ದೇವರ ಮುಂದೆ ತನ್ನನ್ನೇ ತಗ್ಗಿಸಿಕೊಂಡ, ದೇವರಿಗೆ ಅದೇ  ಮೆಚ್ಚುಗೆಯಾಯಿತು

ಜಂಭದ ಮನಸ್ಸಿಗೆ ಪ್ರಾರ್ಥನೆ ಕಷ್ಟವಂತೆ. ನಾವು ನಮ್ಮ ಒಳ್ಳೆಯತನವನ್ನು ಹೋಲಿಸಿಕೊಳ್ಳಬೇಕಾದರೆ, ಅದು ಇತರ ಮನುಷ್ಯರೊಂದಿಗೆ ಅಲ್ಲ ದೇವರ ಒಳ್ಳೆಯತನದೊಂದಿಗೆ ಎನ್ನುವ ಮಾತಿದೆ. ದೇವರ ಒಳ್ಳೆಯತನದ ಅಗಾಧತೆ ನಮ್ಮ ಗುರಿಯಾಗಲಿ.  ವಿನಯ ನಮ್ಮ ಪ್ರಾರ್ಥನೆಯ ಗರಿಯಾಗಲಿ - ಜೀವವಾಕ್ಯ 

No comments:

Post a Comment