ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.03.21

ಮೊದಲನೇ ವಾಚನ: ಯೆರೆಮಿಯ 31:31-34

ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು. ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣ ತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”

ಕೀರ್ತನೆ: 51:1-2, 10-11, 12-13.
ಶ್ಲೋಕ: ಶುದ್ಧ ಹೃದಯವನು ದೇವಾ, ನಿರ್ಮಿಸು I

ಕೃಪಾಳು, ದೇವಾ, ಕರುಣಿಸೆನ್ನನು I
ಕರುಣಾನಿಧಿ, ಅಳಿಸೆನ್ನ ದೋಷವನು II
ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I
ದೋಷಪರಿಹರಿಸಿ ಶುದ್ಧಗೊಳಿಸೆನ್ನನು II

ಶುದ್ಧ ಹೃದಯವನು ದೇವಾ, ನಿರ್ಮಿಸು I
ಅಂತರಂಗವನು ಚೇತನಗೊಳಿಸು II
ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I
ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II

ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I
ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II
ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I
ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II

ಎರಡನೇ ವಾಚನ: ಹಿಬ್ರಿಯರಿಗೆ 5:7-9

ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು. ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು. ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.

ಶುಭಸ೦ದೇಶ: ಯೋವಾನ್ನ 12:20-30

ಆರಾಧನೆಗೆಂದು ಹಬ್ಬಕ್ಕೆ ಬಂದಿದ್ದವರಲ್ಲಿ ಕೆಲವರು ಗ್ರೀಕರು. ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅವರಿಬ್ಬರೂ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ. ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯ ಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ. ನನ್ನ ಸೇವೆ ಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆ ಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು. ಯೇಸುಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ. ‘ಪಿತನೇ, ನಿಮ್ಮ ನಾಮಮಹಿಮೆಯನ್ನು ಬೆಳಗಿಸಿ’ ” ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು. ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು. ಯೇಸುಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ.

No comments:

Post a Comment