25.04.21

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4: 8-12

ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ, ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ: ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”

ಕೀರ್ತನೆ: 118:1, 8-9, 21-23, 26-27, 28
ಶ್ಲೋಕ: ಮನೆಕಟ್ಟುವವರು ಮೂಲೆಗೆಸೆದ ಕಲ್ಲು, ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು. 

ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II

ಮನುಜರಲಿ ಭರವಸೆಯಿಡುವುದಕ್ಕಿಂತ I
ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II

9ರಾಜರಲಿ ಭರವಸೆಯಿಡುವುದಕ್ಕಿಂತ I
ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II

ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I
ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II

22ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II

23ಪ್ರಭುವಿನಿಂದಲೆ ಆದ ಈ ಕಾರ್ಯ I
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II

ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I
ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II

28ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II

ಎರಡನೇ ವಾಚನ: 1 ಯೋವಾನ್ನ 3: 1-2

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ.

ಶುಭಸಂದೇಶ: ಯೋವಾನ್ನ 10:11-18

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ: “ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ. ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ. ಅವನು ಕೇವಲ ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ. ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ. ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು. “ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ. ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.

No comments:

Post a Comment

11.01.26 - "ಅವರು ನಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದಿಕ್ಷಾಸ್ನಾನ ಕೊಡುವರು"

ಮೊದಲನೇ ವಾಚನ: ಯೆಶಾಯ 40:1-5, 9-11 (ಯೆಶಾಯ: 41:1-4, 6-7) ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯ...