ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

10.06.21 - "ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು;"

ಮೊದಲನೇ ವಾಚನ: 2 ಕೊರಿಂಥಿಯರಿಗೆ 3: 13-4:1, 3-6

ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ. ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ. ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ. ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’ ಈ ವಾಕ್ಯದಲ್ಲಿ ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ. ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ. ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. ನಾವು ಪ್ರಚಾರ ಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ. ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ. ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತ ಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ. “ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.

ಕೀರ್ತನೆ: 85: 8-9, 10-11, 12-13
ಶ್ಲೋಕ: ಪ್ರಭುವಿನ ಮಹಿಮೆ ನಾಡಿನಲ್ಲಿರುವುದು ನಿರುತ

ನಾ ಕೇಳುತ್ತಿರುವೆನು, ಪ್ರಭು ಹೇಳುವುದನು
ತನ್ನ ಜನರಿಗಾರ ನುಡಿವುದು ಶಾಂತಿಯನು
ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ
ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ ಶ್ಲೋಕ

ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು
ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು
ಸತ್ಯತೆಯು ಹುಟ್ಟುವುದು ಭೂಮಿಯಿಂದ
ನೀತಿಯು ದೃಷ್ಟಿಸುವುದು ಗಗನದಿಂದ. ಶ್ಲೋಕ

ಪ್ರಭು ಕೊಟ್ಟೇ ತೀರುವನು ಒಳಿತನು
ನಮ್ಮ ನಾಡು ನೀಡುವುದು ಬೆಳೆಯನು
ನಡೆವುದು ಪ್ರಭುವಿನ ಮುಂದೆ ನೀತಿ
ಮಾಡುವುದು ಆತನ ಹೆಜ್ಜೆಗೆ ಹಾದಿ ಶ್ಲೋಕ

ಶುಭಸಂದೇಶ: ಮತ್ತಾಯ 5: 20-26


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ " ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿ ಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು."

No comments:

Post a Comment