ಮೊದಲನೇ ವಾಚನ: ಯೆಶಾಯ: 61:9-11
ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.” ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು. ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.
1 ಸಮುವೇಲ 2:1, 4-8
ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ.
ಶುಭಸಂದೇಶ: ಲೂಕ: 2:41-51

ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?” ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು.
No comments:
Post a Comment