ಮೊದಲನೇ ವಾಚನ: 2 ಕೊರಿಂಥಿಯರಿಗೆ 9:6-11
ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು. ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.
ಕೀರ್ತನೆ: 112:1-2, 3-4, 9
ಶ್ಲೋಕ: ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು
ಅಲ್ಲೆಲೂಯ ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು
ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು
ಬಲಿಷ್ಠವಾಗುವುದು ಜಗದೊಳು ಅವನ ಸಂತಾನ
ಸಜ್ಜನರ ಸಂತತಿ ಪಡೆವುದು ಆಶೀರ್ವಚನ ಶ್ಲೋಕ
ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ
ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ
ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು
ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು ಶ್ಲೋಕ
ಉದಾರತೆಯಿಂದ ಕೊಡುವನು ಬಡವರಿಗೆ
ಫಲಿಸುವುದು ಅವನಾ ನೀತಿ ಸದಾಕಾಲಕೆ
ಮಹಿಮೆತರುವ ಕೋಡುಮೂಡುವುದು ಅವನಿಗೆ ಶ್ಲೋಕ
ಶುಭಸಂದೇಶ: ಮತ್ತಾಯ 6:1-6, 16-18
"ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮ ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು." "ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು." "ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."
No comments:
Post a Comment