ಮೊದಲನೇ ವಾಚನ: 2 ಕೊರಿಂಥಿಯರಿಗೆ 12:1-10
ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ; ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು. ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು. ಅಲ್ಲಿ ಅವನಿಗೆ ಕೇಳಿ ಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು. ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ. ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು. ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ. ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ. ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತ ಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.ಕೀರ್ತನೆ: 34:7-8, 9-10, 11-12
ಶ್ಲೋಕ: ಸವಿದು ನೋಡು ಪ್ರಭುವಿನ ಮಾಧುರ್ಯವನು
ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು
ಕಾಯುವನು ಪ್ರಭಿವಿನ ದೂತನೆ ಬಂದಿಳಿದು
ಸವಿದು ನೋಡು ಪ್ರಭುವಿನ ಮಾಧುರ್ಯವನು
ಆತನನು ಆಶ್ರಯಿಸಿಕೊಂಡವನು ಧನ್ಯನು ಶ್ಲೋಕ
ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ
ಯುವ ಕೇಸರಿಗೆ ಇರಬಹುದು ಹಸಿವು, ದಾಹ
ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ. ಶ್ಲೋಕ
ಬನ್ನಿ ಮಿತ್ರರೇ, ಆಲಿಸಿರೀ ಮಾತನು
ಕಲಿಸುವೆನು ನಾ ನಿಮಗೆ ದೇವ ಭಯವನು
ಎಲೈಮಾನವ, ಬಲುದಿನ ಬಾಳಲು ಬಯಸುವೆಯಾ?
ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? ಶ್ಲೋಕ
No comments:
Post a Comment