ಮೊದಲನೇ ವಾಚನ: ಆದಿಕಾಂಡ 12:1-9
ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧು ಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟು ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆ ಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ. “ನಿನ್ನನ್ನು ಹರಸುವವರನು ನಾ ಹರಸುವೆ. ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.” ಸರ್ವೇಶ್ವರ ಹೀಗೆಂದು ಹೇಳಿದಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು. ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿ ಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು. ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು. ಅಲ್ಲಿ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆ ಮಾಡಿ ಆರಾಧಿಸಿದನು. ತರುವಾಯ ಅಲ್ಲಿಂದ ಮುಂದೆ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
ಕೀರ್ತನೆ: 33: 12-13, 18-19, 20, 22
ಶ್ಲೋಕ: ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ
ಭುವನು ದೇವರಾಗಿ ಪಡೆದ ಜನಾಂಗ ಧನ್ಯ I
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II
ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I
ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II ಶ್ಲೋಕ
ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II
ತಪ್ಪಿಸುವನವನು ಪ್ರಾಣವನು ಮರಣದಿಂದ I
ಉಳಿಸುವನು ಜೀವವನು ಕ್ಷಾಮಡಾಮರದಿಂದ II ಶ್ಲೋಕ
ಕಾದಿದೆ ಎನ್ನ ಮನ ಪ್ರಭುವಿಗಾಗಿ I
ಆತನಿಹನು ಎನಗೆ ಗುರಾಣಿಯಾಗಿ II
ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ I
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ II ಶ್ಲೋಕ
ಶುಭಸಂದೇಶ:ಮತ್ತಾಯ 7:1-5
"ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."
No comments:
Post a Comment