ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

22.06.21 - "ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು"

ಮೊದಲನೇ ವಾಚನ: ಆದಿಕಾಂಡ 13:2, 5-18

ಅಬ್ರಾಮನು ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು. ಈಗ ಅವನಿಗೆ ಪಶುಪ್ರಾಣಿಗಳಿದ್ದವು, ಬೆಳ್ಳಿ ಬಂಗಾರವಿತ್ತು. ಅವನೀಗ ಘನ ಧನವಂತನಾಗಿದ್ದನು. ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೆ ಕುರಿಮಂದೆಗಳೂ ದನಕರುಗಳೂ ಗುಡಾರಬಿಡಾರಗಳೂ ಇದ್ದವು. ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆ ಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ. ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು. ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು. ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ.” ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೊದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯ ಪಡೆದಿತ್ತು. ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವ ದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು. ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೊದೋಮ್‍ಗೆ ಸವಿೂಪದಲ್ಲಿ ಗುಡಾರ ಹಾಕಿದನು. ಸೊದೋಮಿನ ಪಟ್ಟಣದವರು ಬಹಳ ದುಷ್ಟರು. ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು. ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವ ಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು. ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ. ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು. ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಕೀರ್ತನೆ: 15:1-5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗುಡಾರದಲಿ ಬಿಡಾರಮಾಡಲು? ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು?  

ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I
ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II
ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಶ್ಲೋಕ

ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II
ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I
ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II ಶ್ಲೋಕ

ಕೊಡುವನು ಕಡವನು, ಬಯಸನು ಬಡ್ಡಿಯನು I
ಎಡವರ ಕೇಡಿಗೆ ಪಡೆಯನು ಲಂಚವನು I
ಕದಲನೆಂದಿಗೂ ಈಪರಿ ನಡೆವವನು II ಶ್ಲೋಕ

ಶುಭಸಂದೇಶ:ಮತ್ತಾಯ 7:6, 12-14

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು." "ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ." "ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು."

No comments:

Post a Comment