ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.08.21 - "ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು;"

ಮೊದಲನೇ ವಾಚನ: ಯೆರೆಮಿಯ 16:2-4, 12-15


“ನೀನು ಮದುವೆಯಾಗಬೇಡ. ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ. ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತಾನೆ, ಕೇಳು: ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.” ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ. ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯ ದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು”. ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು. ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ,’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.

ಕೀರ್ತನೆ 78 : 3-4, 23-24, 25
ಶ್ಲೋಕ: ಅನುಗ್ರಹಿಸಿದನು ಪ್ರಭು ಸ್ವರ್ಗದ ದವಸಧಾನ್ಯವನು. 

ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ
ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ 
ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ
ಮರೆಮಾಡೆವು ಅವರ ಸಂತತಿಯಾದ ನಿಮಗೆ

ಮೇಘಮಂಡಲಕೆ ಆಜ್ಞೆಯಿತ್ತನಾತ
ಅಂತರಿಕ್ಷದಾ ದ್ವಾರಗಳನು ತೆರೆದನಾತ
ಸುರಿಸಿದನು ಅವರ ಮೇಲೆ ಉಣಲು ಅನ್ನವನು
ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು

ನರರಿಗುಣಲು ಕೊಟ್ಟನು ದೇವದೂತರ ಆಹಾರವನು
ಇತ್ತನವರಿಗೆ ತೃಪ್ತಿಕರವಾದ ಔತಣವನು
ಕರೆತಂದನವನು ತನ್ನ ಪವಿತ್ರ ನಾಡಿಗೆ
ಭುಜಬಲದಿಂದ ಗಳಿಸಿದಾ ಪರ್ವತ ಸೀಮೆಗೆ

ಎರಡನೆಯ ವಾಚನ: ಎಫೆಸಿಯರಿಗೆ 4:17, 20-24

ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು. ಕ್ರಿಸ್ತಯೇಸುವಿನಿಂದ ನೀವು ಇಂಥದ್ದೇನನ್ನು ಕಲಿಯಲಿಲ್ಲ. ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ? ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ. ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ. ನಿಮ್ಮ ಹೃನ್ಮನಗಳು ನವೀಕೃತವಾಗಲಿ. ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.

ಶುಭಸಂದೇಶ: ಯೋವಾನ್ನ 6:24-35


ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು. ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ. ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು. ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು. ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ? ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು, ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?” ಎಂದರು. ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ. ಏಕೆಂದರೆ, ಸ್ವರ್ಗದಿಂದ ಇಳಿದು ಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು. ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು. ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.

31.07.21 - "ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,"

ಮೊದಲನೆಯ ವಾಚನ: ಯಾಜಕಕಾಂಡ 25:1, 8-17

ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು: “ಅದಲ್ಲದೆ, ಏಳುವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು. ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ವಿೂಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು. ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷಿತೋಟದ ಹಣ್ಣನ್ನು ಸಂಗ್ರಹಿಸಬಾರದು. ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ವಿೂಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು. ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು. ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು. ಕಳೆದ ಜೂಬಿಲಿ ವರ್ಷದಿಂದ ಇಷ್ಟು ವರ್ಷ ಆಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅಂತೆಯೇ ಮಾರುವವನು ಇಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ. ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.

ಕೀರ್ತನೆ 67:1-2, 4, 6-7
ಶ್ಲೋಕ: ನಿನ್ನ ಕೀರ್ತಸಲಿ ದೇವಾ, ಜನರೆಲ್ಲರೂ.

ಹರಸು ದೇವಾ, ನಮ್ಮನಾಶೀರ್ವದಿಸು
ನಿನ್ನ ಮುಖ ಕಾಂತಿಯಿಂದೆಮ್ಮನು ಬೆಳಗಿಸು
ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ
ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲಾ

ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ
ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ
ಹರ್ಷಾನಂದವಾಗಲಿ ಜನಾಂಗಗಳಿಗೆ. 

ಇತ್ತನೆಮ್ಮ ದೇವನು ಆಶೀರ್ವಾದವನು
ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು.
ನಮ್ಮೆಲ್ಲರನು ದೇವನು ಹರಸಲಿ
ಎಲ್ಲೆಡೆ ಆತನ ಭಯಭಕ್ತಿಯಿರಲಿ.

ಶುಭಸಂದೇಶ ವಾಚನ: ಮತ್ತಾಯ 14:1-12


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತ ರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು. ಅವನು ತನ್ನ ಪರಿಚಾರಕರಿಗೆ, "ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ," ಎಂದನು. ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು. ಏಕೆಂದರೆ ಆತನು, "ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ," ಎಂದು ಹೆರೋದನಿಗೆ ಹೇಳುತ್ತಿದ್ದನು. ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು. ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು. ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದನು. ಅವಳು ತನ್ನ ತಾಯಿಯ ಸಲಹೆ ಪಡೆದು, "ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ," ಎಂದಳು. ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣವನ್ನು ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು. ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು; ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.

30.07.21 - ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ

ಮೊದಲನೆಯ ವಾಚನ: ಯಾಜಕಕಾಂಡ 23:1, 4-11, 15-16, 27, 34-38

ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಗೆ ಹೇಳಿದರು. " ಸರ್ವೇಶ್ವರನಿಂದ ನೇಮಕವಾದ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು : ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಾಸ್ಕಹಬ್ಬವಾಗಬೇಕು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು." ಮೋಶೆಯ ಮುಖಾಂತರ ಇಸ್ರಯೇಲರಿಗೆ ಸರ್ವೇಶ್ವರ ಹೀಗೆ ಆಜ್ಞಾಪಿಸಿದರು : " ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿ ತಂದೊಪ್ಪಿಸಬೇಕು. ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲ್ಗೊಂಡು, ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು. ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸ ಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನಮಾಡಬೇಕು. ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನಗಳವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಮೊದಲನೆಯ ದಿನ ದೇವಾರಧನೆಗಾಗಿ ಸಭೆ ಸೇರಬೇಕು, ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಿಬೇಕು. ಎಂಟನೆಯ ದಿನದಂದು ದೇವಾರಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು. ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ನೀವು ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು. ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು."

ಕೀರ್ತನೆ 81:2-3, 4-5, 9-10
ಶ್ಲೋಕ: ಹಾಡಿರಿ ಶುಭಗೀತೆಯನು ಬಲಪ್ರಧನಾದ ದೇವನಿಗೆ.

ಆರಂಭಿಸಿ ಸಂಗೀತವನು ಬಾರಿಸಿ ಮೃದಂಗವನು,
ನುಡಿಸಿರಿ ಮಧುರ ವೀಣೆಯನು ಸ್ವರಮಂಡಲವನು,,
ಊದಿರಿ ಕೊಂಬನು ಅಮವಾಸ್ಯೆಯಲಿ,
ಉತ್ಸವ ದಿನವಾದ ಪೂರ್ಣಿಮೆಯಲಿ,,

ದೇವರಿತ್ತ ನಿಯಮವದು ಯಕೋಬ್ಯರಿಗೆ,
ಕೊಟ್ಟ ಕಟ್ಟಳೆಯದು ಇಸ್ರಯೇಲರಿಗೆ,,
ಈಜಿಪ್ಟಿರಿಗೆದುರಾಗಿ ತೆರಳಿದಂದು,
ಜೋಸೆಫ್ಯರಿಗಾತ ವಿಧಿಸಿದಾಜ್ಞೆಯನು,,

ಇರಬಾರದು ಅನ್ಯದೇವತೆಗಳು ನಿಮ್ಮಲ್ಲಿ,
ಪರದೇವತೆಗಳ ಪೂಜೆ ಕೂಡದು ನಿಮ್ಮಲ್ಲಿ,
ತೆರೆಯಿರಿ ನಿಮ್ಮ ಬಾಯನು,
ತುಂಬಿಸಿ ತೃಪ್ತಿಪಡಿಸುವೆ ನಾನದನು,,

ಶುಭಸಂದೇಶ ವಾಚನ: ಮತ್ತಾಯ 13:54-58


ಆ ಕಾಲದಲ್ಲಿ ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋದನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, " ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು ? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ ? ಇವನು ಆ ಬಡಗಿಯ ಮಗನಲ್ಲವೇ ? ಮರಿಯಳು ಇವನ ತಾಯಲ್ಲವೇ ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೇ ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು ? " ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, " ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು, ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು, " ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

29.07.21 - "ನೀವೇ ಅಭಿಷಿಕ್ತರಾದ ಲೋಕೋದ್ಧಾರಕ"

ಮೊದಲನೇ ವಾಚನ: ವಿಮೋಚನಾಕಾಂಡ 40:16-21, 34-38

ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನೂ ಮಾಡಿದನು. ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರ ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಕಂಬಗಳನ್ನು ನಿಲ್ಲಿಸಿದನು. ಗಡಾರದ ಮೇಲೆ ಡೇರೆಯ ಬಟ್ಟೆಗಳನ್ನು ಹಾಸಿ ಆ ಡೇರೆಗೆ ಮೇಲು ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು. ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟುಮಂಜೂಷವನ್ನು ಗುಡಾರದೊಳಕ್ಕೆ ತಂದುಅದರ ಮುಂದೆ ತೆರೆಯನ್ನು ಇರಿಸಿಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. ಆಗ ಮೇಘವೊಂದು ದೇವದರ್ಶನದ ಗುಡಾರವನ್ನು  ಮುಚ್ಚಿತುಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು. ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿ ಇದ್ದುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಬಿಡಾರದಲ್ಲಿ  ಹೋಗಲಾರದೆ ಇದ್ದನು. ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರುಆ ಮೇಘವು ಬಿಡದೆ ಇರುವಾಗ ಅದು ಬಿಡುವತನಕ ಪ್ರಯಾಣ ಮಾಡದೆ ಇರುತ್ತಿದ್ದರು. ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತುರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.

ಕೀರ್ತನೆ: 84:3, 4, 5-6, 8, 11
ಶ್ಲೋಕ: ಹೇ ಪ್ರಭೂ ನಿನ್ನ ನಿವಾಸಗಳೆನಿತೋ ಸುಂದರ


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.  ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು. ಮಾರ್ತ ಯೇಸುವನ್ನು ಕಂಡು, "ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ," ಎಂದಳು. ಯೇಸು, "ನಿನ್ನ ಸಹೋದರನು ಜೀವಂತವಾಗಿ ಏಳುವನು," ಎಂದರು. "ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತವಾಗಿ ಏಳುವನೆಂದು ನನಗೆ ತಿಳಿದಿದೆ," ಎಂದಳು ಮಾರ್ತ. ಯೇಸು, ಅವಳಿಗೆ, " ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀನು ವಿಶ್ವಾಸಿಸುತ್ತೀಯಾ?" ಎಂದು ಕೇಳಲು ಅವಳು,  "ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ," ಎಂದು ಹೇಳಿದಳು.

28.07.21

ಮೊದಲನೆಯ ವಾಚನ: ವಿಮೋಚನಕಾಂಡ 34:29-35


ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ. ಮೋಶೆಯ ಮುಖ ಹೀಗೆ ಪ್ರಕಾಶವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು. ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು. ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು. ಅವರೊಡನೆ ಮಾತಾಡಿ ಮುಗಿಸಿದ ಮೇಲೆ ಮೋಶೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು. ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು. ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.

ಕೀರ್ತನೆ 99:5, 6, 7, 9
ಶ್ಲೋಕ: ಪರಮ ಪಾವನನು ನಮ್ಮೀಸ್ವಾಮಿ ದೇವನು

ಪರಮ ಪಾವನನು ನಮ್ಮೀಸ್ವಾಮಿ ದೇವನು
ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು
ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು
ಸಮುವೇಲನು ಸಹ ಆತನ ಶರಣರಲಿ ಒಬ್ಬನು.

ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು
ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು
ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು.

ಘನಪಡಿಸಿರೆಮ್ಮ ಸ್ವಾಮಿ ದೇವನನು
ಶ್ರೀಪರ್ವತದಲಿ ವಂದಿಸಿ ಆತನನು
ಪರಮಪವಿತ್ರನು ಆ ನಮ್ಮ ದೇವನು.

ಶುಭಸಂದೇಶ: ಮತ್ತಾಯ 13: 44-46

"ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡು ಕೊಂಡುಬಿಡುತ್ತಾನೆ. "ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನಘ್ರ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.

27.7.21 - "ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು"

ಮೊದಲನೇ ವಾಚನ: ವಿಮೋಚನಾಕಾಂಡ: 33:7-11, 34:5-9, 28

ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ " ದೇವ ದರ್ಶನದ ಗುಡಾರ" ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವ ದರ್ಶನದ ಗುಡಾರಕ್ಕೆ ಹೋಗುತ್ತಿದ್ದರು. ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಕ್ಕೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು. ಮೋಶೆ ಗುಡಾರದೊಳಕ್ಕೆ ಹೋದ ಕೂಡಲೆ ಮೇಘ ಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು. ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡ ಬೀಳುತ್ತಿದ್ದರು. ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ. ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದ ಮೇಲೆ ಮೇಘಾವೃತರಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು, "ಸರ್ವೇಶ್ವರ" ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಸರ್ವೇಶ್ವರ ಅವನ ಎದುರಿನಲ್ಲಿ ಹಾದು ಹೋಗುತ್ತಾ ಹೀಗೆಂದು ಪ್ರಕಟಿಸಿದರು: "ಸರ್ವೇಶ್ವರನು ಕರುಣಾಮಯನು, ದಯಾಳು ದೇವರು, ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು. ಸಾವಿರಾರು ತಲೆಗಳವರೆಗೂ ಅಚಲ ಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷ ಪರಿಣಾಮಗಳನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು." ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ, "ಸ್ವಾಮಿ ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಠಮಾರಿಗಳು.  ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ," ಎಂದು ಪ್ರಾರ್ಥಿಸಿದನು. ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳು ಅನ್ನ ಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಕೀರ್ತನೆ: 103:6-7, 8-9, 10-11, 12-13
ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು

ಸಾಧಿಸುವನು ಪ್ರಭು ನ್ಯಾಯನೀತಿಯನು
ದೊರಕಿಸುವನು ಶೋಷಿತರಿಗೆ ನ್ಯಾಯವನು
ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ
ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ.

ಪ್ರಭು ದಯಾಳು, ಕೃಪಾಪೂರ್ಣನು
ಸಹನಶೀಲನು, ಪ್ರೀತಿಮಯನು
ಆತನು ಸದಾ ತಪ್ಪು ಹುಡುಕುವವನಲ್ಲ
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ.

ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ
ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ.

ಪಡುವಣದಿಂದ ಮೂಡಣವೆಷ್ಟೋ ದೂರ
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ಕನಿಕರಿಸುವನಾತ ತನಗೆ ಅಂಜುವವರಿಗೆ.

ಶುಭಸಂದೇಶ: ಮತ್ತಾಯ 13:36-43

ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, "ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ," ಎಂದು ಕೇಳಿಕೊಂಡರು. ಅದಕ್ಕೆ ಯೇಸು, "ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀ ಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ, ಕೊಯ್ಲುಗಾರರೇ ದೇವದೂತರು.  ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟು ಹಾಕಿದಂತೆಯೇ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು  ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು. ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!

26.07.21

ಮೊದಲನೇ ವಾಚನ: ವಿಮೋಚನಾಕಾಂಡ 32:15-24, 30-34

ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು. ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ್ದ ಅಕ್ಷರಗಳೇ ಆಗಿದ್ದವು. ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು. ಅದಕ್ಕೆ ಮೋಶೆ: “ನನಗೆ ಕೇಳಿಸುವುದು ವಿಜಯಗೀತೆಯಲ್ಲ ಅದು ಅಪಜಯದ ಶೋಕಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತಶ್ಲೋಕ” ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು. ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿ ಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು. ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು, “ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ. ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು. ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆ ಏನಾದನೋ ಗೊತ್ತಿಲ್ಲ’, ಎಂದರು. ಅದಕ್ಕೆ ನಾನು, ‘ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,’ ಎಂದೆ, ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು. ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು. ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು, ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು. ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ. ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು. ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ವಿೂರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿ ಬಿಡುತ್ತೇನೆ. ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.” ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.

ಕೀರ್ತನೆ: 106:19-23
ಶ್ಲೋಕ: ಪ್ರಭು ದಯಾಪೂರಿತ, ತೋರಿ ಅತನಿಗೆ ನಿಮ್ಮ ಕೃತಜ್ಞತಾ ಸ್ತ್ರೋತ.

ಹೋರೇಬಿನಲಿ ಮಾಡಿದರು ಬಸವನನು
ಆರಾಧಿಸಿದರು ಆ ಎರಕದ ಶಿಲೆಯನು
ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು
ಆರಿಸಿಕೊಂಡರು ಹುಲ್ಲುತಿನ್ನುವ ಬಸವನ ವಿಗ್ರಹವನು.

ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು
ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು.
ಹಾಮನಾಡಿನಲಿ ಮಾಡಿದ ಅದ್ಭುತಗಳನು
ಕೆಂಗಡಬಳಿ ನಡೆದ ಘೋರ ಕೃತ್ಯಗಳನು.

ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು
ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು
ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು.

ಶುಭಸಂದೇಶ: ಮತ್ತಾಯ 13:31-35

ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡುಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ." ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: "ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು." ಸಾಮತಿಗಳ ಸುರಿಮಳೆಯೇಕೆ? ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು" ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.

25.04.21

ಮೊದಲನೆಯ ವಾಚನ 2 ಅರಸರುಗಳು 4:42-44

ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ವ್ಯಕ್ತಿ ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, " ಇದನ್ನು ಜನರಿಗೆ ಕೊಡು, ಅವರು ಊಟಮಾಡಲಿ, " ಎಂದು ಹೇಳಿದನು. ಅದಕ್ಕೆ ಅವನು, " ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ, " ಎಂದನು. ಎಲಿಷನು, " ಇರಲಿ, ಕೊಡು, ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು ' ಎಂಬುದು ಸರ್ವೇಶ್ವರನ ನುಡಿ, " ಎಂದು ಹೇಳಿದರು. ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು.

ಕೀರ್ತನೆ: 145:10-11, 16-19.
ಶ್ಲೋಕ: ಎಲ್ಲರ ಕೋರಿಕೆಗಳನು ಈಡೇರಿಸುವವನು ನೀನು ಪ್ರಭೂ.

ಪ್ರಭೂ, ನಿನ್ನನ್ನು ಸ್ತುತಿಪುದು ಸೃಷ್ಟಿಯೆಲ್ಲವೂ
ಕೊಂಡಾಡುವುದು ನಿನ್ನನು ಭಕ್ತಸಮೂಹವು
ಪ್ರಸಿದ್ದಪಡಿಸುವುದು ನಿನ್ನ ರಾಜ್ಯದ ಮಹತ್ವವನು
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು

ಎಲ್ಲ ಜೀವಿಗಳ ಕಣ್ಣು, ಪ್ರಭೂ, ನಾಟಿವೆ ನಿನ್ನ ಕಡೆಗೆ
ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ
ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು
ಎಲ್ಲರ ಕೋರಿಕೆಗಳನು ಈಡೇರಿಸುವವನು

ಪ್ರಭುವಿನ ಮಾರ್ಗ ಧರ್ಮಸಮ್ಮತ
ಆತನ ಕಾರ್ಯವೆಲ್ಲ ಪುನೀತ
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ
ಯಥಾರ್ಥವಾಗಿ ಆತನನು ಅರಸುವವರಿಗೆ

ಎರಡನೆಯ ವಾಚನ: ಎಫೆಸಿಯರಿಗೆ 4:1-6

ಸಹೋದರರೇ, ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ಪೌಲನಾದ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು, ಒಬ್ಬರೇ ಪವಿತ್ರಾತ್ಮರನ್ನು ಪಡೆದವರು, ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ, ವಿಶ್ವಾಸವೂ ಒಂದೇ, ದೀಕ್ಷಾಸ್ನಾನವೂ ಒಂದೇ. ದೇವರು ಒಬ್ಬರೇ, ಸರ್ವರ ತಂದೆಯೂ ಅವರೇ, ಸರ್ವಶ್ರೇಷ್ಠರೂ ಅವರೇ, ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.

ಶುಭಸಂದೇಶ: ಯೊವಾನ್ನ 6:1-15

ಆ ಕಾಲದಲ್ಲಿ ಯೇಸು ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು. ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು. ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. " ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು? " ಎಂದು ಯೇಸು ಫಿಲಿಪ್ಪನನ್ನು ಕೇಳಿದರು. ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು. ಅದಕ್ಕೆ ಫಿಲಿಪ್ಪನು, " ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು, " ಎಂದನು. ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ, ಸಿಮೋನ್ ಪೇತ್ರನ ಸಹೋದರನಾದ ಅಂದ್ರೇಯನು, " ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತವೆ? " ಎಂದನು. ಯೇಸು " ಜನರನ್ನು ಊಟಕ್ಕೆ ಕೂರಿಸಿರಿ, " ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು. ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನು ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, " ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿ, ಒಂದು ತುಂಡೂ ಹಾಳಾಗಬಾರದು, " ಎಂದು ತಮ್ಮ ಶಿಷ್ಯರಿಗೆ ಹೇಳಿದರು. ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು. ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, " ಲೋಕ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ, " ಎಂದು ಹೇಳತೊಡಗಿದ್ದರು. ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟಿರು.

24.07.21 - "ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ"

ಮೊದಲನೇ ವಾಚನ: ವಿಮೋಚನಾಕಾಂಡ 24:3-8

ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, "ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ," ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು. ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. ಇಸ್ರಯೇಲರ ಯೌವನಸ್ಥರು ಸರ್ವೇಶ್ವರಸ್ವಾಮಿಗೆ ದಹನ ಬಲಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು. ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು. ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, "ಸರ್ವೇಶ್ವರಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ," ಎಂದರು. ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರಮೇಲೆ ಚಿಮುಕಿಸಿ, "ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ," ಎಂದನು.

ಕೀರ್ತನೆ: 50:1-2, 5-6, 14-15
ಶ್ಲೋಕ: ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ

ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ
ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ
ಸುರ ಸುಂದರವಾದ ಸಿಯೋನಿನಿಂದ
ಉದಯಸಿಹನು ದೇವನು ಶೋಭೆಯಿಂದ.

“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು
ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು
ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ
ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ.

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ
ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ
ಕಷ್ಟದಲಿ ಮೊರೆಯಿಡೆ, ನೆರವಾಗುವೆ
ಆಗ ನೀ ನನ್ನನು ಕೊಂಡಾಡುವೆ.

ಶುಭಸಂದೇಶ: ಮತ್ತಾಯ 13:24-30



ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿಹೋದ. ಗೋದಿ ಬೆಳೆದು ತೆನೆ ಬಿಟ್ಟಾಗ ಕಳೆ ಬೆಳೆದಿರುವುದು ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, "ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯು ಕಾಣಿಸಿಕೊಂಡಿದೆಯಲ್ಲಾ, ಅದೆಲ್ಲಿಂದ ಬಂತು?" ಎಂದರು. ಯಜಮಾನ, "ಇದು ನನ್ನ ವೈರಿ ಮಾಡಿರುವ ಕೆಲಸ," ಎಂದ. 'ಹಾಗಾದರೆ, ಕಳೆಗಳನ್ನು ಕಿತ್ತು ಹಾಕೋಣವೇ?' ಎಂದರು ಆಳುಗಳು. ಅದಕ್ಕೆ ಯಜಮಾನ "ಬೇಡ, ಬೇಡ; ಕಳೆಗಳನ್ನು ಕೀಳುವಾಗ, ಗೋದಿಯನ್ನೂ ಕಿತ್ತು ಬಿಟ್ಟೀರಿ. ಸುಗ್ಗಿಯವರೆಗೆ  ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟು ಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,' ಎಂದ

23.07.21

ಮೊದಲನೇ ವಾಚನ: ವಿಮೋಚನಾಕಾಂಡ 20:1-17

ದೇವರು ಕೊಟ್ಟ ಆಜ್ಞೆಗಳು ಇವು: "ನಾನೇ ನಿನ್ನ ದೇವರಾದ ಸರ್ವೇಶ್ವರ ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು. ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ. ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ. ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ. ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು. ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು. ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯ ದೇಶದವರು ಯಾವ ಕೆಲಸವನ್ನು ಮಾಡಬಾರದು. ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು. ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ. ಕೊಲೆಮಾಡಬೇಡ, ವ್ಯಭಿಚಾರಮಾಡಬೇಡ, ಕದಿಯಬೇಡ, ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ,  ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ."

ಕೀರ್ತನೆ: 19:8, 9, 10, 11
ಶ್ಲೋಕ: ಪ್ರಭುವೇ, ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೆ

ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ
ನಂಬಲರ್ಹ; ಪ್ರಭುವಿನ ಶಾಸನ ಮುಗ್ಧರಿಗದು ಸುಜ್ಞಾನ.

ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ
ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ
ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ
ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ.

ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ
ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ.

ಶುಭಸಂದೇಶ: ಮತ್ತಾಯ 13:18-23


ಯೇಸು ತಮ್ಮ ಶಿಷ್ಯರನ್ನುದ್ದೇಶಿಸಿ, "ಈಗ  ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ: ಒಬ್ಬನು ಶ್ರೀ ಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಬೇರೊಬ್ಬನು ಈ ಸಂದೇಶವನು ಕೇಳಿದಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟ ಕೋಟಲೆಗಳು ಬಂದೊದಗಿದ ಕೂಡಲೆ ಎಡವಿ ಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ: ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ,  ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ," ಎಂದರು.

22.07.21 - "ರಬ್ಬೂನಿ"

ಮೊದಲನೇ ವಾಚನ: ಪರಮಗೀತೆ  3:1-4 


ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ, ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ ಎದ್ದು ಊರೆಲ್ಲಾ  ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದ "ನನ್ನ ಪ್ರಾಣಕಾಂತನನ್ನು ಕಂಡಿರಾ?"  ಎಂದು ವಿಚಾರಿಸಿದೆ; ಅವರನ್ನು ಬಿಟ್ಟು ತುಸು ಹೊತ್ತಿನಲ್ಲೇ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯಿಯ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.

ಕೀರ್ತನೆ: 63:2, 3-4, 5-6, 8-9
ಶ್ಲೋಕ: ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ

ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ
ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ.

ನಿನ್ನ ಮಂದಿರದಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ.

ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ.

ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ನಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ.

ಶುಭಸಂದೇಶ: ಯೊವಾನ್ನ  20:1-2, 11-18


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು.  ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.

21.07.21

ಮೊದಲನೆಯ ವಾಚನ: ವಿಮೋಚನಕಾಂಡ 16:1-5, 9-15


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ' ಸೀನ್ ' ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು. ಮರುಭೂಮಿಯಲ್ಲಿ ಇಸ್ರಯೇಲರ ಸಮಾಜವೆಲ್ಲ ಮೋಶೆ ಮತ್ತು ಆರೋನರ ವಿರುದ್ಧ ಗೊಣಗುಟ್ಟಿತು. " ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದುತಂದಿದ್ದೀರಿ, ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೇ ಸತ್ತಿದ್ದರೆ ಎಷ್ಟೋ ಲೇಸಾಗಿತ್ತು. ಆಗ ಮಾಂಸಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇತುಂಬ ಊಟಮಾಡುತ್ತಿದ್ದೆವು, " ಎಂದು ಗೊಣಗಿದರು. ಆಗ ಸರ್ವೇಶ್ವರ ಮೋಶೆಗೆ, " ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ. ಆರನೆಯ ದಿನದಲ್ಲಿ ಮಾತ್ರ ಪ್ರತಿ ದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ದಪಡಿಸಿಕೊಳ್ಳಬೇಕು, " ಎಂದು ಹೇಳಿದರು. ಆರೋನನಿಗೆ ಮೋಶೆ, ' ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ' ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ' ಎಂದು ಆಜ್ಞಾಪಿಸು, " ಎಂದು ಹೇಳಿದನು. ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು. ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: " ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ' ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ, ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು ' ಎಂದು ಹೇಳು, " ಎಂದರು. ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜುಬಿದ್ದಿತು. ಆ ಮಂಜು ಆರಿಹೋದನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ' ಮನ್ನ ' ಎಂದರೆ, ಇದೇನಿರಬಹುದೆಂದು ವಿಚಾರಿಸಿದರು. ಮೋಶೆ ಅವರಿಗೆ, " ಇದು ಸರ್ವೇಶ್ವರಸ್ಸಾಮಿ ನಿಮಗೋಸ್ಕರ ಕೊಟ್ಟ ಆಹಾರ, " ಎಂದನು.

ಕೀರ್ತನೆ: 78:18-19, 23-28
ಶ್ಲೋಕ: ಅನುಗ್ರಹಿಸಿದನು ಪ್ರಭು, ಸ್ವರ್ಗದ ದವಸಧಾನ್ಯವನು.

ಕೋರಿದರು ತಮಗಿಷ್ಟವಾದ ಆಹಾರವನೇ
ಪರೀಕ್ಷಿಸಿದರು ಮನದಲಿ ಆ ದೇವರನೇ
ಜರೆವ ಮಾತಿನಲಿ ಆಡಿಕೊಂಡರಿಂತು
ಅಡವಿಯಲಿ ದೇವನೂಟ ಬಡಿಸುವನೆಂತು

ಆದರೂ ಮೇಘಮಂಡಲಕೆ ಆಜ್ಞೆಯಿತ್ತನಾತ
ಅಂತರಿಕ್ಷದಾ ದ್ವಾರಗಳನು ತೆರೆದನಾತ
ಸುರಿಸಿದನು ಅವರ ಮೇಲೆ ಉಣಲು ಅನ್ನವನು
ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು

ನರರಿಗುಣಲು ಕೊಟ್ಟನು ದೇವದೂತರ ಆಹಾರವನು
ಇತ್ತನವರಿಗೆ ತೃಪ್ತಿಕರವಾದ ಔತಣವನು
ಆಕಾಶದಲ್ಲೆಬ್ಬಿಸಿದನು ಮೂಡಣ ಗಾಳಿಯನು
ಒಲುಮೆಯಿಂದ ಹೊರಡಿಸಿದನು ತೆಂಕಣಗಾಳಿಯನು

ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು
ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು
ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ
ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ

ಶುಭಸಂದೇಶ: ಮತ್ತಾಯನು 13:1-9

ಆ ಕಾಲದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು. ಜನರು ತಂಡೋಪತಂಡವಾಗಿ ಕೂಡಿ ಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು: " ಒಬ್ಬ ರೈತ ಬಿತ್ತುವುದಕ್ಕೆ ಹೋದ, ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜಗಳನ್ನು ತಿಂದುಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು. ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು. ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ, " ಎಂದು ಒತ್ತಿ ಹೇಳಿದರು.

20.07.21 - "ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,"

ಮೊದಲನೇ ವಾಚನ: ವಿಮೋಚನಾಕಾಂಡ 14:21-15:1


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಸರ್ವೇಶ್ವರಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು. ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು. ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು. ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು. ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು, ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನೆ,” ಎಂದುಕೊಂಡರು. ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು. ಅಂತೆಯೇ ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿ ಹೋಗತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು. ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು. ಆ ದಿನ ಸರ್ವೇಶ್ವರಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು. ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು. ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ! ಕುದುರೆಗಳನು, ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು.

ಕೀರ್ತನೆ: 15:8-9, 10, 12, 17
ಶ್ಲೋಕ: ಮಾಡೋಣ ಸರ್ವೇಶ್ವರನ ಗುಣಗಾನ

ಸಿಟ್ಟಿನಿಂದ ನೀ ಮುಸುಗೆರೆದಾಗಲೆ
ಸಮುದ್ರವಾಯಿತು ನೀರೊಡ್ಡಿನಂತೆ
ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ
ಜಲ ಗಟ್ಟಿಯಾಯಿತು ನೆಲದಂತೆ.

ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು:
‘ಹಿಂದಟ್ಟಿ ಹಿಡಿಯುವೆವು ಅವರನು
ಅಪಹರಿಸಿಕೊಳ್ವೆವು ಅವರ ಸೊತ್ತನು
ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು
ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.

ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು
ಅವರು ಸೀಸದ ಗುಂಡಿನಂತೆ ಮುಳುಗಿಹೋಗಲು
ಅವರನ್ನು ಸಮುದ್ರವು ನುಂಗಿಬಿಡಲು.
ಭುವಿ ಬಾಯ್ದೆರೆದು ನುಂಗಿತು ಹಗೆಗಳನು
ನೀ ನಿನ್ನ ಬಲಗೈಯನ್ನು ಚಾಚಲು.

ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ
ನೀನವರನ್ನು ತಂದು ನೆಲೆಗೊಳಿಸುವೆ.
ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ
ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ
ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.

ಶುಭಸಂದೇಶ: ಮತ್ತಾಯ 12:46-50

ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. "ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ," ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, "ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?" ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈ ತೋರಿಸಿ, "ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ," ಎಂದರು.

19.07.21 - "ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"

ಮೊದಲನೇ ವಾಚನ: ವಿಮೋಚನಾಕಾಂಡ 14:5-18



ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು. ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು. ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನೂ ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿ ಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು. ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸವಿೂಪಕ್ಕೆ ಬಂದರು. ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು. ಫರೋಹನು ಸವಿೂಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು. ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದು ತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ? ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,’ ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೆ?” ಎಂದು ದೂರಿದರು. ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ. ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ. ಸರ್ವೇಶ್ವರಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು. ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು. ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು. ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು; ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ ನಾನು ಫರೋಹನನ್ನು, ಅವನ ಸಮಸ್ತ ಸೈನ್ಯವನ್ನು, ರಥಗಳನ್ನು ಹಾಗು ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.

ಕೀರ್ತನೆ: 15:1, 2, 3-4, 5-6
ಶ್ಲೋಕ: ಮಾಡೋಣ ಸರ್ವೇಶ್ವರನ ಗುಣಗಾನ 

ಮಹೋನ್ನತ ಆತ ಗಳಿಸಿದ ವಿಜಯ!
ಕುದುರೆಗಳನು, ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು.
ಆತನನ್ನು ವರ್ಣಿಸುವೆನು, ಆತನೆನ್ನ ದೇವನು
ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.

ಸರ್ವೇಶ್ವರನು ಯುದ್ಧಶೂರನು
‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.
ಫರೋಹನ ವೀರ ಶ್ರೇಷ್ಟರನು
ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ.

ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು
ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.
ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ
ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ

ಶುಭಸಂದೇಶ: ಮತ್ತಾಯ 12:38-42


ಬಳಿಕ ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, "ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ," ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: "ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲುರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲುರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

18.07.21

ಮೊದಲನೇ ವಾಚನ: ಯೆರೆಮೀಯಾ 23: 1-6

“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ!” ಇದು ಸರ್ವೇಶ್ವರಸ್ವಾಮಿಯ ನುಡಿ. ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರಿಕೆವಹಿಸಲೇ ಇಲ್ಲ. ನಿಮ್ಮ ನೀಚ ಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು. ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು. ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.” ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಕೆ’ಯನ್ನು ಚಿಗುರಿಸುವೆನು. ಆಗ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.

ಕೀರ್ತನೆ: 23: 1-6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?

ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II

ಎರಡನೆಯ ವಾಚನ: ಎಫೆಸಿಯರಿಗೆ 2:13-18

ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು. ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ. ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ. ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ. ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು. ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾ ರ್ಗವಾಯಿತು.

ಶುಭಸಂದೇಶ: ಮಾರ್ಕ 6: 30-34

ಆ ಕಾಲದಲ್ಲಿ ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು, ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.

17.07.21 - "ನನಗೆ ಪರಮ ಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು"

ಮೊದಲನೇ ವಾಚನ: ವಿಮೋಚನಾಕಾಂಡ 12:37-42


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು. ಅವರೊಂದಿಗೆ ಬಹು ಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು. ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಅಹಾರವನ್ನು ಸಿದ್ಧಪಡಿಸಿಕೊಳ್ಳಲೂ  ಸಾಧ್ಯವಾಗಿರಲಿಲ್ಲ. ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರ ಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು. ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟು ಬಂದವು. ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದುದ್ದು ಆ ರಾತ್ರಿಯೇ. ಆದುದರಿಂದಲೇ ಇಸ್ರಯೇಲರೆಲ್ಲರು ತಲ ತಲಾಂತಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.

ಕೀರ್ತನೆ: 136:1, 23-24, 10-12, 13-15

ಶ್ಲೋಕ: ಪ್ರಭುವಿನ ಪ್ರೀತಿ ಶಾಶ್ವತ

ಶುಭಸಂದೇಶ: ಮತ್ತಾಯ 12:14-21

ಫರಿಸಾಯರು ಯೇಸುವನ್ನು ಕೊಲೆ ಮಾಡಲು ಒಳ ಸಂಚು ಹೂಡಿದರು.  ತಮಗೆ ವಿರುದ್ಧ ಒಳ ಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟು ಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು. ಮತ್ತು ತಮ್ಮ ವಿಷಯಗಳನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: "ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನ ಬಂಧು, ನಂದಿ ಹೋಗುತಿಹ ದೀನ ದಲಿತರಿಗೆ ಕೃಪಾಸಿಂಧು, ನ್ಯಾಯ ನೀತಿಗೆ ಜಯ ದೊರಕಿಸದೆ ಬಿಡನಿವನು. ನಂಬುವರು ಅನ್ಯ ಜನರೆಲ್ಲರು ಇವನ ನಾಮವನು."

16.07.21 - "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ"

ಮೊದಲನೇ ವಾಚನ: ವಿಮೋಚನಾಕಾಂಡ  11:10-12:14


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕ ಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆ ಕೊಡದೆಹೋದನು. ಈಜಿಪ್ಟ್ ದೇಶದಲ್ಲಿ ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೀಗೆಂದರು:  "ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು. ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆ ಇಡಬೇಕು. "ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡು ಮರಿಯನ್ನಾಗಲಿ ಆರಿಸಿಕೊಳ್ಳಬೇಕು. ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ. ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು. ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆ ವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮತಮ್ಮ ಕೂಟಗಳಲ್ಲಿ ಕೊಯ್ಯಬೇಕು. ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು. ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟ ಮಾಡಬೇಕು. ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು. ಮರುದಿನ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಆ ಬೋಜನವನ್ನು ಮಾಡಬೇಕಾದ ಕ್ರಮ ಇದು; ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು, ಬೇಗಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ. ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದು ಹೋಗುವೆನು. ಮನುಷ್ಯರಾಗಿರಲಿ, ಪ್ರಾಣಿಗಳಾಗಿರಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ! ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.  ಆದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಕೀರ್ತನೆ: 116:12-13, 15, 16, 17-18
ಶ್ಲೋಕ: ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು

ಆಗ ನಂಬಿದರು ಪ್ರಭುವಿನಾ ಮಾತನು I
ಮಾಡಿದರಾಗ ಆತನ ಗುಣಗಾನವನು II
ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I
ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II

ಪೂರೈಸಿದನಾತ ಅವರ ಕೋರಿಕೆಯನು I
ಕಳುಹಿಸಿದನಾದರೆ ಭೀಕರ ರೋಗವನು II
ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I
ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II

ಭೂಮಿ ಬಾಯ್ದೆರೆದು ನುಂಗಿತು ದಾತಾನನನು I
ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II
ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I
ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II

ಶುಭಸಂದೇಶ: ಮತ್ತಾಯ 12:1-8

ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, "ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ," ಎಂದರು. ಅದಕ್ಕೆ ಯೇಸು, "ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ? ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ? ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?. ದೇವಾಲಯಕ್ಕಿಂತಲೂ ಶ್ರೇಷ್ಟವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ, "ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ" ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ. ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ," ಎಂದರು.