ಮೊದಲನೇ ವಾಚನ: ಯೆರೆಮೀಯಾ 23: 1-6
“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ!” ಇದು ಸರ್ವೇಶ್ವರಸ್ವಾಮಿಯ ನುಡಿ. ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರಿಕೆವಹಿಸಲೇ ಇಲ್ಲ. ನಿಮ್ಮ ನೀಚ ಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು. ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು. ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.” ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಕೆ’ಯನ್ನು ಚಿಗುರಿಸುವೆನು. ಆಗ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.
ಕೀರ್ತನೆ: 23: 1-6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?
ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II
ಎರಡನೆಯ ವಾಚನ: ಎಫೆಸಿಯರಿಗೆ 2:13-18
ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು. ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ. ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ. ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ. ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು. ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾ ರ್ಗವಾಯಿತು.
ಶುಭಸಂದೇಶ: ಮಾರ್ಕ 6: 30-34
ಆ ಕಾಲದಲ್ಲಿ ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು, ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
No comments:
Post a Comment