ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

20.07.21 - "ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,"

ಮೊದಲನೇ ವಾಚನ: ವಿಮೋಚನಾಕಾಂಡ 14:21-15:1


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಸರ್ವೇಶ್ವರಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು. ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು. ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು. ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು. ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು, ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನೆ,” ಎಂದುಕೊಂಡರು. ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು. ಅಂತೆಯೇ ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿ ಹೋಗತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು. ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು. ಆ ದಿನ ಸರ್ವೇಶ್ವರಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು. ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು. ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ! ಕುದುರೆಗಳನು, ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು.

ಕೀರ್ತನೆ: 15:8-9, 10, 12, 17
ಶ್ಲೋಕ: ಮಾಡೋಣ ಸರ್ವೇಶ್ವರನ ಗುಣಗಾನ

ಸಿಟ್ಟಿನಿಂದ ನೀ ಮುಸುಗೆರೆದಾಗಲೆ
ಸಮುದ್ರವಾಯಿತು ನೀರೊಡ್ಡಿನಂತೆ
ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ
ಜಲ ಗಟ್ಟಿಯಾಯಿತು ನೆಲದಂತೆ.

ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು:
‘ಹಿಂದಟ್ಟಿ ಹಿಡಿಯುವೆವು ಅವರನು
ಅಪಹರಿಸಿಕೊಳ್ವೆವು ಅವರ ಸೊತ್ತನು
ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು
ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.

ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು
ಅವರು ಸೀಸದ ಗುಂಡಿನಂತೆ ಮುಳುಗಿಹೋಗಲು
ಅವರನ್ನು ಸಮುದ್ರವು ನುಂಗಿಬಿಡಲು.
ಭುವಿ ಬಾಯ್ದೆರೆದು ನುಂಗಿತು ಹಗೆಗಳನು
ನೀ ನಿನ್ನ ಬಲಗೈಯನ್ನು ಚಾಚಲು.

ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ
ನೀನವರನ್ನು ತಂದು ನೆಲೆಗೊಳಿಸುವೆ.
ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ
ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ
ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.

ಶುಭಸಂದೇಶ: ಮತ್ತಾಯ 12:46-50

ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. "ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ," ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, "ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?" ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈ ತೋರಿಸಿ, "ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ," ಎಂದರು.

No comments:

Post a Comment