ಮೊದಲನೆಯ ವಾಚನ: ಸಂಖ್ಯಾಕಾಂಡ 11:25-29
ಮೋಶೆ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು ಆಗ ಸರ್ವೇಶ್ವರ ಮೇಘದಲ್ಲಿ ಇಳಿದು ಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ. ಎಲ್ಲಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರೂ ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾದಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟು ಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದುಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು. ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, " ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ, " ಎಂದು ತಿಳಿಸಿದನು. ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, " ಗುರುವೇ, ಅವರಿಗೆ ಅದು ಬೇಡವೆನ್ನಬೇಕು " ಎಂದು ವಿನಂತಿಸಿದನು. ಅದಕ್ಕೆ ಮೋಶೆ, " ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು ! " ಎಂದನು.
ಶ್ಲೋಕ: ಪ್ರಭುವಿನ ನಿಯಮ ನೀತಿಬದ್ದ, ಮನಸ್ಸಿಗದು ಒಸಗೆ
ಪ್ರಭುವಿನ ಆಜ್ಞೆ ಪರಿಪೂರ್ಣ, ಜೀವನಕದು ನವಚೇತನ|
ನಂಬಲರ್ಹ ಪ್ರಭುವಿನ ಶಾಸನ, ಮುಗ್ದರಿಗದು ಸುಜ್ಞಾನ||
ಪ್ರಭುವಿನ ಭೀತಿ ಪವಿತ್ರ, ಅದೆಂದಿಗೂ ಶಾಶ್ವತ|
ಪ್ರಭುವಿನ ತೀರ್ಪು ಯಥಾರ್ಥ, ಪರಿಪೂರ್ಣ ನ್ಯಾಯಯುತ||
ತನ್ನ ತಪ್ಪನ್ನು ತಾನರಿತುಕೊಳ್ಳುವವನಾರಯ್ಯಾ?|
ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ||
ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ|
ಸಂಭಾವಿತನಾಗುವನು ಅವುಗಳ ಪಾಲನೆಯಿಂದ||
ಕಾಪಾಡೆನ್ನನು ಬೇಕುಬೇಕೆಂದು ಪಾಪಮಾಡದಂತೆ|
ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ|
ನಿರ್ದೋಷಿಯಾಗುವನು, ಆ ದ್ರೋಹಕ್ಕೊಳಗಾಗದಂತೆ||
ಎರಡನೆಯ ವಾಚನ: ಯಕೋಬ 5:1-6
ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ. ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ. ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಕರಿಸಿಟ್ಟುಕೊಂಡಿದ್ದೀರಿ. ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ದವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ. ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ. ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.
ಶುಭಸಂದೇಶ: ಮಾರ್ಕ 9:38-43, 45, 47-48
ಆ ಕಾಲದಲ್ಲಿ ಯೊವಾನ್ನನು ಯೇಸುವಿಗೆ, " ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ, ಆದಕಾರಣ ಅವನನ್ನು ತಡೆದೆವು, " ಎಂದನು. ಅದಕ್ಕೆ ಯೇಸು, " ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಬುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು. ನಮಗೆ ವಿರೋಧಿ ಅಲ್ಲದವನು ನಮ್ಮ ಪರವಾದಿ. ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಎಂದರು. ಯೇಸು ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, " ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವನಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು, ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು, " ಎಂದರು.
No comments:
Post a Comment