ಮೊದಲನೆಯ ವಾಚನ: ದಾನಿಯೇಲ 7:9-10, 13-14
ನಾನು ನೋಡುತ್ತಿದ್ದ ಹಾಗೆ ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಯಂತೆ ಧಗಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಲ್ಲಿ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿ ಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ದನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ -- ಕುಲ -- ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!
ಕೀರ್ತನೆ 138:1-5
ಶ್ಲೋಕ: ಹೃದಯಪೂರ್ವಕ ವಂದನೆ ಪ್ರಭೂ ನಿನಗೆ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ.
ಹೃದಯಪೂರ್ವಕ ವಂದನೆ ಪ್ರಭೂ ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||
ಪೊಗಳುವೆ ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು||
ನಿನ್ನ ಗುಣಗಾನ ಮಾಳ್ವರು ಪ್ರಭೂ, ಭೂರಾಜರೆಲ್ಲರು|
ಏಕೆನೆ, ನೀ ಉಸುರಿದೆ ನುಡಿಗಳನು ಕೇಳ್ವರವರೆಲ್ಲರು||
ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು|
ಆತನ ಮಾರ್ಗಗಳನು ಹಾಡಿ ಹರಸುವರು||
ಶುಭಸಂದೇಶ: ಯೊವಾನ್ನ 1:47-51
ಆ ಕಾಲದಲ್ಲಿ ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಯೇಸು " ಇಗೋ, ನೋಡಿ ನಿಜವಾದ ಇಸ್ರಯೇಲನು ಈತನಲ್ಲಿ ಕಪಟವಿಲ್ಲ, " ಎಂದು ನುಡಿದರು. ನತಾನಿಯೇಲನು " ನನ್ನ ಪರಿಚಯ ನಿಮಗೆ ಹೇಗಾಯಿತು? " ಎಂದು ಕೇಳಲು ಯೇಸು " ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ, " ಎಂದು ಉತ್ತರ ಕೊಟ್ಟರು. ಅದಕ್ಕೆ ನತಾನಿಯೇಲನು " ಗುರುದೇವಾ, ದೇವರ ಪುತ್ರ ನೀವೇ, ಇಸ್ರಯೇಲರ ಅರಸ ನೀವೇ, " ಎಂದನು. ಆಗ ಯೇಸು ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ, " ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, " ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ, " ಎಂದು ಹೇಳಿದರು.
No comments:
Post a Comment