ಮೊದಲನೇ ವಾಚನ: ರೋಮನರಿಗೆ 6:19-23
ಸಹೋದರರೇ, ಇದನ್ನು ಅರ್ಥಮಾಡಿಕೊಳ್ಳಲು ನೀವು ಆಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ. ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ. ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಃದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯ ಫಲ. ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧ ಜೀವನ; ಅಂತಿಮವಾಗಿ ಅಮರ ಜೀವನ, ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.
ಕೀರ್ತನೆ: 1:1-2, 3, 4, 6
ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆಯುವಾತನು ಧನ್ಯನು
ಪಾಪಾತ್ಮರ ಪಥದಲಿ ಕಾಲೂರದೆ|
ಧರ್ಮನಿಂದಕರ ಕೂಟದಲಿ ಕೂರದೆ|
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವನಾರೋ ಅವನೇ ಧನ್ಯನು|
ಹಗಲಿರುಳೆನ್ನದೆ ಅದನೇ ಧ್ಯಾನಿಸುತ್ತಿರುವವನಾರೋ ಅವನೇ ಧನ್ಯನು||
ನದಿಯ ಬದಿಯಲೇ ಬೆಳೆದಿಹ ಮರದಂತೆ|
ಸಕಾಲಕೆ ಫಲವೀವ ವೃಕ್ಷದಂತೆ||
ಎಲೆಬಾಡದೆ ಪಸಿರಿರುವ ತರುವಂತೆ|
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ||
ದುರಳರಾದರೋ ತೂರಿ ಹೋಗುವರು|
ಬಿರುಗಾಳಿಗೆ ತರಗೆಲೆಯಾಗುವರು||
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ|
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ||
ಶುಭಸಂದೇಶ: ಲೂಕ 12:49-53
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು," ಎಂದರು.
No comments:
Post a Comment