ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

23.10.21

ಮೊದಲನೇ ವಾಚನ: ರೋಮನರಿಗೆ 8:1-11

ಸಹೋದರರೇ, ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ - ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪ ಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣ ದಂಡನೆಯನ್ನು ವಿಧಿಸಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಾಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಶರೀರ ಸ್ವಭಾವದಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ. ಶರೀರ ಸ್ವಭಾವದಲ್ಲೇ ಮಗ್ನರಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು  ಮೆಚ್ಚಿಸಲು ಸಾಧ್ಯವೇ ಇಲ್ಲ. ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತ ಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ. ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮ ಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಕೀರ್ತನೆ: 24:1-2, 3-4, 5-6
ಶ್ಲೋಕ: ಇಂಥವರೇ ದೇವರ  ದರ್ಶನಾಭ್ಯರ್ಥಿಗಳು

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಲೂಕ 13:1-9

ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, "ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ? ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆ ಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೇ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸುತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ," ಎಂದರು. ಆನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: "ಒಬ್ಬನು ತನ್ನ ದ್ರಾಕ್ಷಿ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, "ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದು ಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥಮಾಡಬೇಕು?" ಎಂದು ಹೇಳಿದ. ಅದಕ್ಕೆ ತೋಟಗಾರನು, ಸ್ವಾಮಿಾ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ," ಎಂದನು.

No comments:

Post a Comment