ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

04.12.21 - "ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆ ತೋರಿಸುವರು"

ಮೊದಲನೇ ವಾಚನ: ಯೆಶಾಯ 30:19-21, 23-26 


ಪರಮ ಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆ ತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ "ಇದೇ ಮಾರ್ಗ, ಇದರಲ್ಲೇ ನಡೆಯಿರಿ" ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು. ಹೊಲ ಮೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆ ಕೊತ್ತಲಗಳು ಬಿದ್ದು ಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು. 

ಕೀರ್ತನೆ: 147:1-2, 3-4, 5-6 
ಶ್ಲೋಕ: ಪ್ರಭುವಿನಲ್ಲಿ ವಿಶ್ವಾಸವಿಡುವವರು ಉಲ್ಲಾಸಿಸುತ್ತಾರೆ 

ಶುಭಸಂದೇಶ: ಮತ್ತಾಯ 9:35-10:1, 6-8 

ಯೇಸುಸ್ವಾಮಿ ಉರೂರುಗಳಲ್ಲೂ ಹಳ್ಳಿ ಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನ ಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ: ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗ ರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶವೇನೆಂದರೆ: ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ: ಹೋಗುತ್ತಾ, "ಸ್ವರ್ಗಸಾಮ್ರಾಜ್ಯವು ಸಮಿಾಪಿಸಿದೆ" ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.

No comments:

Post a Comment