ಮೊದಲನೇ ವಾಚನ: ಯೆಶಾಯ 41:13-20
ನಿನ್ನ ದೇವರಾದ ಸರ್ವೇಶ್ವರ ನಾನೇ, ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ. ಸರ್ವೇಶ್ವರ ಇಂತೆನ್ನುತ್ತಾರೆ: "ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ, ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನ್ನೆ, ಹೊಟ್ಟು ಧೂಳಾಗಿಸುವೆ ಗುಡ್ಡಗಳನ್ನೆ ನೀನು ತೂರಲು ಅವುಗಳನ್ನು ಕೊಂಡೊಯ್ವದು ಗಾಳಿ, ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ. ದೀನದರಿದ್ರರು ನೀರಿಗಾಗಿ ಪರದಾಡುವಾಗ, ಬಾಯಾರಿ ಅವರ ನಾಲಿಗೆ ಒಣಗಿಹೋದಾಗ, ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವನೆ? ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು, ತಗ್ಗುತಿಟ್ಟುಗಳಲ್ಲಿ ಒರತೆಗಳನು, ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು, ಬುಗ್ಗೆಗಳಾಗಿ ಮರುಭೂಮಿಯನು, ನೆಡುವೆನು ಅಡವಿಯಲಿ ದೇವದಾರು, ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಇದನು ಕುರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ಇದನ್ನು ಮಾಡಿದ ಹಸ್ತವು ಸರ್ವಶ್ವರಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ."
ಕೀರ್ತನೆ: 144:1, 9, 10-12, 13
ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು ಸಹನಶೀಲನು, ಪ್ರೀತಿಪೂರ್ಣನು
ಶುಭಸಂದೇಶ: ಮತ್ತಾಯ 11:11-15
ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು. ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೆವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಟನೆ ಸರಿ. ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರಿಗೆ ಸ್ವರ್ಗ ಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗೂ ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ ಈಗೋ, ಬರತಕ್ಕ ಎಲೀಯನು ಈ ಯೊವಾನನ್ನೇ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
No comments:
Post a Comment