ಮೊದಲನೇ ವಾಚನ: ಸಿರಾಖ 48:1-4, 9-11
ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ, ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ, ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು ಎಷ್ಟು ಘನವಂತನಾಗಿದ್ದೆ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರುಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನ್ನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು.
ಕೀರ್ತನೆ: 80:2, 3, 15-16, 18, 19
ಶ್ಲೋಕ: ಸರ್ವಶಕ್ತನಾದ ದೇವನೇ, ಉದ್ಧರಿಸೆಮ್ಮನು ಬೆಳಗಲಿ ನಿನ್ನ ಮುಖಕಾಂತಿ, ಪಡೆದೆವು ರಕ್ಷಣೆಯನು
ಶುಭಸಂದೇಶ: ಮತ್ತಾಯ 17:9, 10-13
ಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ ಯೇಸು, "ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಶಿಷ್ಯರು, "ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?", ಎಂದು ಯೇಸುವನ್ನು ಕೇಳಿದರು ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ, ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು," ಎಂದರು. ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.
No comments:
Post a Comment