ಮೊದಲನೇ ವಾಚನ: ರೋಮನರಿಗೆ 13:8-10
ಸಹೋದರರೇ, ಒಬ್ಬರನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು. "ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ," ಈ ಮುಂತಾದ ಆಜ್ಞೆಗಳೆಲ್ಲವೂ "ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು," ಎಂಬ ಒಂದೇ ಆಜ್ಞೆಯಲ್ಲಿ ಅಡಗಿದೆ. ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.
ಕೀರ್ತನೆ: 112:1-2, 4-5, 9
ಶ್ಲೋಕ: ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತನು
ಆತನ ಆಜ್ಞೆಗಳಲಿ ಹಿಗ್ಗುವವನು ಭಾಗ್ಯನು ||
ಬಲಿಷ್ಠವಾಗುವುದು ಜಗದೊಳು ಅವನ ಸಂತಾನ|
ಸಜ್ಞನರ ಸಂತತಿ ಪಡೆವುದು ಆಶೀರ್ವಚನ||
ಸಜ್ಜನರಿಗೆ ಮೂಡುವುದು ಜ್ಯೋತಿ ಕತ್ತಲೊಳು|
ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು||
ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ|
ನ್ಯಾಯದಿಂದ ವ್ಯವಹರಿಸುವಂಥ ಮನುಜನು ಭಾಗ್ಯವಂತ||
ಉದಾರತೆಯಿಂದ ಕೊಡುವನು ಬಡವರಿಗೆ|
ಫಲಿಸುವುದು ಅವನಾ ನೀತಿ ಸದಾಕಾಲಕೆ|
ಮಹಿಮೆತರುವ ಕೋಡು ಮೂಡುವುದು ಅವನಿಗೆ||
ಶುಭಸಂದೇಶ: ಲೂಕ 14:25-33
ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: "ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ - ತಾಯಿ, ಹೆಡತಿ - ಮಕ್ಕಳು, ಸೋದರ - ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, "ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!" ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಶರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ".
No comments:
Post a Comment