ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.12.21

ಮೊದಲನೆಯ ವಾಚನ: ಮೀಕ 5:1-4

ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು ! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿ ಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 80:1-2, 14-15, 17-18
ಶ್ಲೋಕ: ಓ ದೇವಾ ಪುನರುದ್ಧಾರ ಮಾಡೆಮ್ಮನು| ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು||

ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ|
ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ||
ತೋರ್ಪಡಿಸು ನಿನ್ನ ಶೌರ್ಯವನು|
ಬಂದು ಜಯಪ್ರದನಾಗು ನಮಗೆ||

ಸರ್ವಶಕ್ತನಾದ ದೇವನೇ, ಮರಳಿ ಮುಖತೋರಿಸು|
ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು||
ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು|
ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು||

ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ದರಿಸಿದ ಪುರುಷನನು|
ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು||
ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು|
ಪುನರ್ಜೀವಗೊಳಿಸು ಮಾಳ್ಪೆವು ನಿನ್ನ ನಾಮಸ್ಮರಣೆಯನು||

ಎರಡನೆಯ ವಾಚನ: ಹಿಬ್ರಿಯರಿಗೆ 10:5-10

ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು : " ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು, ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು. ಸರ್ವಾಂಗ ಹೋಮಗಳೂ ಪಾಪಪರಿಹಾರಕಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. ಆಗ ಇಂತೆಂದೆ ನಾನು : ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ, ನಿನ್ನ ಚಿತ್ತವನು ನೆರವೇರಿಸಲೆಂದೇ. "ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ "ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವೂ ನಿಮಗೆ ತರಲಿಲ್ಲ ತೃಪ್ತಿಯನು, " ಎಂದು ಮೊದಲು ಹೇಳುತ್ತಾರೆ. ಅನಂತರ, " ಇಗೋ, ನಾ ಬಂದೆ, ನಿನ್ನ ಚಿತ್ತವನು ನೆರವೇರಿಸಲೆಂದೇ, " ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ. ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.

ಶುಭಸಂದೇಶ: ಲೂಕ 1:39-44

ಆ ಕಾಲದಲ್ಲಿ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇಗಳು ಪವಿತ್ರಾತ್ಮಭರಿತಳಾಗಿ, ಹರ್ಷೋದ್ಗಾರದಿಂದ ಹೀಗೆಂದಳು : " ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ !"

No comments:

Post a Comment