ಮೊದಲನೇ ವಾಚನ: ಯೆಶಾಯ 40:1-5, 9-11 (ಯೆಶಾಯ: 41:1-4, 6-7)
ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ," ಇಗೋ, ಈ ವಾಣಿಯನ್ನು ಕೇಳಿ: "ಸರ್ವೇಶ್ವರಸ್ವಾಮಿಗೆ ಮಾರ್ಗವನ್ನು ಸಿದ್ದಮಾಡಿ ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲ್ಲಿ. ತುಂಬಬೇಕು ಎಲ್ಲ ಹಳ್ಳಕೊಳ್ಳಗಳನ್ನು, ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನ್ನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನ್ನು. ಗೋಚರವಾಗುವುದಾಗ ಸರ್ವೇಶ್ವರಸ್ವಾಮಿಯ ಮಹಿಮೆಯು, ಮಾನಲರೆಲ್ಲರೂ ಅದನ್ನು ಕಾಣುವರು. ಒಟ್ಟಿಗೆ, ಸರ್ವೇಶ್ವರಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ." ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು; 'ಇಗೋ, ನಿಮ್ಮ ದೇವರು' ಎಂದು ಜೂದ ನಗರಗಳಿಗೆ ಸಾರು. ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ. ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ. ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.
ಕೀರ್ತನೆ: 104:1-2, 3-4, 24-25, 27-28, 29-30
ಶ್ಲೋಕ: ಭಜಿಸು ನನ್ನ ಮನವೇ, ಭಜಿಸು, ಪ್ರಭುವನು
ಎರಡನೇ ವಾಚನ: ತೀತ 2:11-14, 3:4-7
ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ. ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಿಮಗೆ ಭೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನುನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ. ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟರು. ಹೀಗಿರುವಾಗ, ಜಗದ ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು. ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು. ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ. ಹೀಗೆ ದೈವಾನುಗ್ರಹದಿಂದ ನಾವು ದೇವರೋಡನೆ ಸತ್ಸಂಬಂದವನ್ನು ಹೊಂದಿದೆವು ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.
ಶುಭಸಂದೇಶ: ಲೂಕ 3:15-16, 21-22
"ಈ ಯೊವಾನ್ನನೇ ಎಲ್ಲರು ಎದುರು ನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ" ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು. ಅದಕ್ಕೆ ಉತ್ತರವಾಗಿ ಯೊವಾನ್ನನು, "ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದಿಕ್ಷಾಸ್ನಾನ ಕೊಡುವರು," ಎಂದನು. ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೆಸುಸ್ವಾಮಿಯೂ ಬಂದು ಸ್ನಾನದೀಕ್ಷೆ ಪಡೆದು ಪ್ರಾರ್ಥಿಸುತ್ತಿರಲು ಆಕಾಶವು ತೆರೆಯಿತು. ಆಗ ಪವಿತ್ತಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು ಅಲ್ಲದೆ, "ನೀನೇ ನನ್ನ ಪುತ್ರ ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು," ಎಂಬ ದೈವವಾಣಿ ಕೇಳಿಸಿತು.
No comments:
Post a Comment