ಮೊದಲನೇ ವಾಚನ: ಯೆರೆಮೀಯ 20:10-13
ಸುತ್ತಮುತ್ತಲು ದಿಗಿಲೆಂದರೆ ದಿಗಿಲು! 'ಬನ್ನಿ, ಇವರ ಮೇಲೆ ಚಾಡಿ ಹೇಳಿ, ನಾವು ಹೇಳುವೆವು' ಎಂದು ಗುಸುಗುಟ್ಟುತ್ತಿರುವರು ಬಹು ಜನರು. "ಇವನು ಎಡವಿಬೀಳಲಿ, ನಾವು ಹೊಂಚಿ ನೋಡುವೆವು" ಎನ್ನುತ್ತಿರುವ ನನ್ನಾಪ್ತ ಮಿತ್ರರೆಲ್ಲರು. "ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿ ತೀರಿಸಿಕೊಳ್ಳುವೆವು.' ಎಂದುಕೊಳ್ಳುತ್ತಿದ್ದರು. ತಮ್ಮ ತಮ್ಮೊಳಗೆ. ಆದರೆ ನನ್ನ ಸಂಗಡ ಇರುವವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯ ಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅಪಮಾನಕ್ಕೆ ಗುರಿಯಾಗುವರು ಎಂದಿಗೂ ಮರಿಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರೀಯಗಳನ್ನೂ ಅಂತರಾಳವನ್ನೂ ವಿಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ. ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವನ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.
ಕೀರ್ತನೆ: 18:2-3, 3-4, 5-6, 7
ಶ್ಲೋಕ: ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ.
ಶುಭಸಂದೇಶ: ಯೊವಾನ್ನ 10:31-42
ಆಗ ಯೆಹೂದ್ಯರು ಯೆಸುವಿನತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು. ಅದಕ್ಕೆ ಯೇಸು, "ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?" ಎಂದರು. ಅದಕ್ಕೆ ಯೆಹೂದ್ಯರು, "ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ," ಎಂದು ಉತ್ತರಕೊಟ್ಟರು. ಆಗ ಯೇಸು, " ನೀವು ದೇವರುಗಳು" ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ? ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ. ಇಂತಿರುವಲ್ಲಿ, ಪಿತನೇ ಪ್ರತಿಷ್ಠಸಿ ಕಳುಹಿಸಿಕೊಟ್ಟವನಾದ ನಾನು, "ದೇವರ ಪುತ್ರನಾಗಿದ್ದೇನೆ" ಎಂದು ಹೇಳಿಕೊಂಡದ್ದಕ್ಕೆ, "ಇವನು ದೇವದೂಷಣೆ ಮಾಡಿದ್ದಾನೆ" ಎನ್ನುತ್ತೀರಲ್ಲಾ? ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ. ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆ ಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು. ಹಾಗೂ ಮನದಟ್ಟಾಗುವುದು," ಎಂದರು. ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು. ಬಳಿಕ ಯೇಸುಸ್ವಾಮಿ ಜೋರ್ಡಾನ್ ನದಿಯನ್ನು ದಾಟಿ ಯೊವಾನ್ನನು ಮೊತ್ತ ಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು. ಹಲವರು ಅವರ ಬಳಿಗೆ ಬರತೊಡಗಿದರು. "ಯೊವಾನ್ನನು ಒಂದು ಸೂಚಕ ಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ" ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು. ಅಲ್ಲಿ ಹಲವರಿಗೆ ಯೇಸುವಿನ್ನಲ್ಲಿ ವಿಶ್ವಾಸ ಹುಟ್ಟಿತು.
No comments:
Post a Comment